ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆ ತಡೆಯುವಂತೆ ಕೋರಿ PIL; ತುರ್ತು ವಿಚಾರಣೆಗೆ ದಿಲ್ಲಿ ಹೈಕೋರ್ಟ್ ನಿರಾಕರಣೆ

Photo |hindustantimes
ಹೊಸದಿಲ್ಲಿ: ಜೂನ್ 6ರಂದು ಜಂತರ್ ಮಂತರ್ನಲ್ಲಿ ನಡೆಯಲಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನೆ ತಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (PIL) ತುರ್ತು ವಿಚಾರಣೆಗೆ ದಿಲ್ಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.
‘ಸೇವ್ ಇಂಡಿಯಾ ಫೌಂಡೇಶನ್’ ಸಲ್ಲಿಸಿರುವ ಅರ್ಜಿಯಲ್ಲಿ, ಪ್ರತಿಭಟನೆಯಿಂದ ಸಾರ್ವಜನಿಕ ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಹಾಗೂ ಪ್ರಮುಖ ಮೂಲಸೌಕರ್ಯಗಳ ಕಾರ್ಯನಿರ್ವಹಣೆಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಸರಕಾರ, ದಿಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ಮುನ್ನೆಚ್ಚರಿಕೆ ಹಾಗೂ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.
ಈ ವಿಷಯವನ್ನು ನ್ಯಾಯಮೂರ್ತಿ ಸೌರಭ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಅಮಿತ್ ಶರ್ಮಾ ಅವರನ್ನೊಳಗೊಂಡ ರಜಾಕಾಲೀನ ಪೀಠದ ಮುಂದೆ ಉಲ್ಲೇಖಿಸಲಾಯಿತು. ಆದರೆ ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಲು ಪೀಠವು ನಿರಾಕರಿಸಿತು.
ಜೂನ್ 6ರಂದು ಜಂತರ್ ಮಂತರ್ ಮತ್ತು ರಾಷ್ಟ್ರ ರಾಜಧಾನಿಯ ಇತರ ಭಾಗಗಳಲ್ಲಿ ಬೃಹತ್ ಸಮಾವೇಶ ನಡೆಸಲು ‘ಕಾಕ್ರೋಚ್ ಜನತಾ ಪಾರ್ಟಿ’ ಕರೆ ನೀಡಿದ್ದು, ಇದಕ್ಕಾಗಿ ಸಾಮಾಜಿಕ ಮಾಧ್ಯಮಗಳ ಮೂಲಕ ಸಂಘಟಿತ ಅಭಿಯಾನ ನಡೆಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಹೆಚ್ಚಿನ ಸಂಖ್ಯೆಯ ಯುವಜನರನ್ನು ಸಂಘಟಿಸಲು ಸಾಮಾಜಿಕ ಮಾಧ್ಯಮಗಳನ್ನು ಬಳಸಲಾಗುತ್ತಿದೆ ಎಂದೂ ಆರೋಪಿಸಲಾಗಿದೆ.
ಕೆಲವು ಆನ್ಲೈನ್ ಪೋಸ್ಟ್ಗಳಲ್ಲಿ ಪ್ರಚೋದನಕಾರಿ ಸಂದೇಶಗಳು, ಕಾನೂನು ಜಾರಿ ಸಂಸ್ಥೆಗಳ ಕ್ರಮಗಳಿಗೆ ಪ್ರತಿರೋಧ ವ್ಯಕ್ತಪಡಿಸುವ ಎಚ್ಚರಿಕೆಗಳು ಹಾಗೂ ಸಾರ್ವಜನಿಕ ಮೂಲಸೌಕರ್ಯಕ್ಕೆ ಅಡ್ಡಿಪಡಿಸುವಂತೆ ಕರೆ ನೀಡುವ ಅಂಶಗಳಿವೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜನರನ್ನು ಪ್ರೋತ್ಸಾಹಿಸಲಾಗುತ್ತಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದಿದ್ದರೆ ಸಾರ್ವಜನಿಕ ಸುರಕ್ಷತೆ, ಸಂಚಾರ ಮತ್ತು ಭದ್ರತಾ ವ್ಯವಸ್ಥೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಜೂನ್ 4ರಂದು ದಿಲ್ಲಿ ಪೊಲೀಸ್ ಆಯುಕ್ತರಿಗೆ ಜನಸಂದಣಿ ನಿಯಂತ್ರಣ ಮತ್ತು ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಇದುವರೆಗೆ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ಅಥವಾ ಕಾರ್ಯಯೋಜನೆ ಪ್ರಕಟಗೊಂಡಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.
ಪ್ರತಿಭಟನೆಯನ್ನು ನಿಯಂತ್ರಿಸುವುದು, ಅಗತ್ಯವಿದ್ದರೆ ನಿರ್ಬಂಧಿಸುವುದು ಅಥವಾ ಸ್ಥಳಾಂತರಿಸುವುದು, ಜನಸಂದಣಿ ನಿಯಂತ್ರಣ ವ್ಯವಸ್ಥೆಗಳನ್ನು ನಿಯೋಜಿಸುವುದು ಹಾಗೂ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸಾರಿಗೆ ಕೇಂದ್ರಗಳು ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಭದ್ರತೆ ಒದಗಿಸುವಂತೆ ದಿಲ್ಲಿ ಪೊಲೀಸರು ಹಾಗೂ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ತುರ್ತು ಸೇವೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳ ಕಾರ್ಯಾಚರಣೆಗೆ ಯಾವುದೇ ಅಡ್ಡಿ ಉಂಟಾಗದಂತೆ ನೋಡಿಕೊಳ್ಳುವಂತೆಯೂ ಮನವಿ ಮಾಡಲಾಗಿದೆ.
‘ಕಾಕ್ರೋಚ್ ಜನತಾ ಪಾರ್ಟಿ’ ಎಂಬುದು ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹುಟ್ಟಿಕೊಂಡಿರುವ ಚಳುವಳಿ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ವಿಚಾರಣೆಯೊಂದರ ವೇಳೆ ಮಾಡಿದ ಮೌಖಿಕ ಟಿಪ್ಪಣಿಯ ಬಳಿಕ ಈ ಚಳುವಳಿ ರೂಪುಗೊಂಡಿತ್ತು. ಕೆಲವೇ ದಿನಗಳಲ್ಲಿ ಲಕ್ಷಾಂತರ ಫಾಲೋವರ್ ಗಳನ್ನು ಗಳಿಸಿದ್ದ ಈ ಚಳುವಳಿಗೆ ಸಂಬಂಧಿಸಿದ ಹಲವು ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಂತರ ಅಮಾನತುಗೊಳಿಸಲಾಗಿತ್ತು.






