ಅಮಿತ್ ಶಾ ಅವರೊಂದಿಗೆ ಚರ್ಚೆ ನಡೆಸಿದ ಕುಮಾರಸ್ವಾಮಿ: ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ಅಂತಿಮ
ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ಹೊಸದಿಲ್ಲಿಯಲ್ಲಿ ಇಂದು ಸಂಜೆ ಮಹತ್ವದ ಮಾತುಕತೆ ನಡೆಸಿದರು.
ಅಮಿತ್ ಶಾ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಂಸದ ಕುಪೇಂದ್ರ ರೆಡ್ಡಿ ಅವರೂ ಭಾಗಿಯಾಗಿದ್ದರು.
ಅಮಿತ್ ಶಾ ಅವರ ಜತೆ ಮೈತ್ರಿಯ ವಿಷಯವೂ ಸೇರಿ ರಾಜ್ಯ ರಾಜಕೀಯದ ಬಗ್ಗೆ ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ದೀರ್ಘ ಸಮಾಲೋಚನೆ ನಡೆಸಿದರು.
ಕ್ಷೇತ್ರ ಹಂಚಿಕೆಯ ಸೇರಿದಂತೆ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್.ಡಿ.ಎ ಮೈತ್ರಿಕೂಟಕ್ಕೆ ಸೇರುವ ಪ್ರಕ್ರಿಯೆಗಳೆಲ್ಲವನ್ನು ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಮುಗಿದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜತೆ ಕೂತು ಚರ್ಚೆ ನಡೆಸಿದ ನಂತರ ಅಂತಿಮಗೊಳಿಸೋಣ ಎಂದು ಅಮಿತ್ ಶಾ ಅವರು ಕುಮಾರಸ್ವಾಮಿ ಅವರಿಗೆ ಹೇಳಿದರು ಎನ್ನಲಾಗಿದೆ.
ಅಲ್ಲದೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳೆಲ್ಲವನ್ನೂ ಎನ್.ಡಿ.ಎ ಮೈತ್ರಿಕೂಟ ಗೆದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಭಾರತದ ಪ್ರಧಾನಮಂತ್ರಿ ಆಗಬೇಕು. ಅದಕ್ಕಾಗಿ ಕರ್ನಾಟಕದಲ್ಲಿ ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಒಟ್ಟಾಗಿ ಮಾಡೋಣ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡು ಅತ್ಯಂತ ವಿಶ್ವಾಸ, ನಂಬಿಕೆಯ ಆಧಾರದ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ಧಾರಗಳನ್ನು ಮಾಡೋಣ ಎಂದು ಶಾ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದರು ಎಂದು ಹೇಳಲಾಗಿದೆ.
ಮಾತುಕತೆಯ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರದ ಬಗ್ಗೆಯೂ ಗೃಹ ಸಚಿವರ ಗಮನಕ್ಕೆ ತಂದಿದ್ದೇನೆ. ರಾಜ್ಯ ಸರಕಾರ ಈವರೆಗೂ ಬಿಡಿಗಾಸನ್ನು ಬರಪೀಡಿತ ಜನರಿಗೆ ಕೊಟ್ಟಿಲ್ಲ ಎನ್ನುವುದು ಅವರಿಗೆ ಗೊತ್ತಿದೆ. ಈ ಬಗ್ಗೆ ಶಾ ಅವರಿಗೆ ಎಲ್ಲಾ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.
ಮುಕ್ಕಾಲು ಗಂಟೆ ಕಾಲ ನಡೆದ ಈ ಸಭೆಯಲ್ಲಿ ಗೃಹ ಸಚಿವರ ಜತೆ ಎಲ್ಲಾ ವಿಷಯಗಳನ್ನು ಮುಕ್ತವಾಗಿ ಚರ್ಚೆ ಮಾಡಿದ್ದೇನೆ. ಕೇಂದ್ರದಲ್ಲಿ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕು. ಈ ಬಗ್ಗೆ ಜೆಡಿಎಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದೇವೆ.
-ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿಗಳು