ಆಧಾರ್ ಅನ್ನು ಪೌರತ್ವದ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ : ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ಪ್ರಶ್ನಿಸಿದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು, ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂಬ ಭಾರತದ ಚುನಾವಣಾ ಆಯೋಗದ (ECI) ನಿಲುವನ್ನು ಅನುಮೋದಿಸಿದೆ. ಅದನ್ನು ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಹೇಳಿದೆ.
“ ಆಧಾರ್ ಅನ್ನು ಪೌರತ್ವದ ನಿರ್ಣಾಯಕ ಪುರಾವೆಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತಿರುವುದು ಸರಿಯಾಗಿದೆ. ಅದನ್ನು ಪರಿಶೀಲಿಸಬೇಕಾಗಿದೆ” ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಅರ್ಜಿದಾರರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರಿಗೆ ತಿಳಿಸಿದರು.
ಪರಿಶೀಲನೆ ಕಾರ್ಯವನ್ನು ಕೈಗೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆಯೇ ಎಂಬುದು ಮೊದಲು ನಿರ್ಧರಿಸಬೇಕಾದ ಪ್ರಶ್ನೆ. "ಅವರಿಗೆ ಅಧಿಕಾರವಿಲ್ಲದಿದ್ದರೆ, ಎಲ್ಲವೂ ಕೊನೆಗೊಳ್ಳುತ್ತದೆ. ಆದರೆ, ಅವರಿಗೆ ಅಧಿಕಾರವಿದ್ದರೆ, ಯಾವುದೇ ಸಮಸ್ಯೆಯಿಲ್ಲ " ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದರು.





