ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ : ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

Photo | PTI
ಹೊಸದಿಲ್ಲಿ: ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಲು ಜುಲೈ 10ರಂದು ಸುಪ್ರೀಂ ಕೋರ್ಟ್ ಸಮ್ಮತಿಸಿದೆ.
ಅರ್ಜಿದಾರರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ತುರ್ತು ವಿಚಾರಣೆಗಾಗಿ ಈ ವಿಷಯವನ್ನು ಪ್ರಸ್ತಾಪಿಸಿದರು. ನ್ಯಾಯಾಲಯ ಗುರುವಾರ ಈ ಬಗ್ಗೆ ವಿಚಾರಣೆ ನಡೆಸಲು ಸಮ್ಮತಿಸಿದೆ.
ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಚುನಾವಣಾ ಆಯೋಗದ ಜೂನ್ 24ರ ನಿರ್ದೇಶನದ ಸಿಂಧುತ್ವವನ್ನು ಪ್ರಶ್ನಿಸಿ ಎನ್ಜಿಒಗಳಾದ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, ಪಿಯುಸಿಎಲ್, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಆರ್ಜೆಡಿ ಸಂಸದ ಮನೋಜ್ ಕುಮಾರ್ ಝಾ ಮತ್ತು ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಸೇರಿದಂತೆ ಇತರರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.
ಚುನಾವಣಾ ಆಯೋಗದ ಕ್ರಮವು ಸಂವಿಧಾನದ 14,19, 21,325 ಮತ್ತು 326ನೇ ವಿಧಿ ಮತ್ತು 1950ರ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 1960ರ ಮತದಾರರ ನೋಂದಣಿ ನಿಯಮಗಳನ್ನು ಉಲ್ಲಂಘಿಸುತ್ತದೆ. ಆದ್ದರಿಂದ ಆದೇಶವನ್ನು ರದ್ದುಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.





