ಸಿಕ್ಕಿಂ | ಜನರ ಮೇಲೆ ನುಗ್ಗಿದ ಹಾಲಿನ ಟ್ಯಾಂಕರ್ ; ಮೂವರು ಮೃತ್ಯು, 16 ಮಂದಿಗೆ ಗಾಯ

Photo: X/ @SikkimExpress
ಗ್ಯಾಂಗ್ಟಕ್ ಗ್ಯಾಂಗ್ಟಕ್ ಜಿಲ್ಲೆಯ ರಾಣಿಪೂಲ್ನಲ್ಲಿ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಜನರ ಮೇಲೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶನಿವಾರ ರಾತ್ರಿ 7.30 ರ ಸುಮಾರಿಗೆ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಜನರ ಮೇಲೆ ನುಗ್ಗಿ, ವಾಹನಗಳಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆಯಿತು ಎಂದು ತಿಳಿದು ಬಂದಿದೆ. ರಾಣಿಪೂಲ್ ನ ಮೇಳ ಮೈದಾನದಲ್ಲಿ ಜನಸಂದಣಿ ತಾಂಬೂಲ ನುಡಿಸಲು ಜಮಾಯಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಟ್ಯಾಂಕರ್ ಚಾಲಕನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಎಲ್ಲಾ ಗಾಯಾಳುಗಳನ್ನು ಸೆಂಟ್ರಲ್ ರೆಫರಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್ನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
"ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
#Sikkim: 3 dead, 20 injured as milk truck crashes into multiple cars at Sikkim fair | Watch video #CarCrash #Truck #accident pic.twitter.com/wq9L6OAtci
— IndiaToday (@IndiaToday) February 11, 2024







