CEC ವಿರುದ್ಧದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಬಂಧನ ಆರೋಪ: ಸಮಗ್ರ ಉತ್ತರ ನೀಡುವಂತೆ ಕೇಂದ್ರ, ದಿಲ್ಲಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಸುಪ್ರೀಂ ಕೋರ್ಟ್ (Photo: PTI)
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ರಾಜಕೀಯ ನಾಯಕರೂ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಅರ್ಜಿಗಳಿಗೆ ಸಮಗ್ರ ಉತ್ತರ ಸಲ್ಲಿಸುವಂತೆ ಕೇಂದ್ರ ಸರಕಾರ ಮತ್ತು ದಿಲ್ಲಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
ಬಂಧನಕ್ಕೆ ಸಂಬಂಧಿಸಿದ ಕೆಲವು ಅರ್ಜಿಗಳಿಗೆ ಮಾತ್ರ ಅಫಿಡವಿಟ್ ಗಳನ್ನು (ಪ್ರಮಾಣಪತ್ರಗಳನ್ನು) ಸಲ್ಲಿಸಲಾಗಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯ ಭಾಟಿ ನ್ಯಾಯಾಲಯಕ್ಕೆ ತಿಳಿಸಿದರು. ಇದನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್, ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠವು, ಎಲ್ಲ ಅರ್ಜಿಗಳಿಗೂ ಸಂಬಂಧಿಸಿದಂತೆ 10 ದಿನಗಳ ಒಳಗೆ ಸಮಗ್ರ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಮತ್ತು ದಿಲ್ಲಿ ಸರಕಾರಗಳಿಗೆ ಸೂಚಿಸಿತು. ಸರಕಾರಗಳ ಉತ್ತರಕ್ಕೆ ಪ್ರತಿಯಾಗಿ ಅರ್ಜಿದಾರರು ತಮ್ಮ ಪ್ರತಿಕ್ರಿಯೆ ಸಲ್ಲಿಸಲು ಒಂದು ವಾರದ ಕಾಲಾವಕಾಶ ನೀಡಿತು.
ಅ.10ರಂದು ನಡೆದ ಪ್ರತಿಭಟನೆಯ ವೇಳೆ ಯಾರನ್ನೂ ಬಂಧಿಸಿಲ್ಲ ಅಥವಾ ವಶಕ್ಕೆ ಪಡೆದಿಲ್ಲ ಎಂದು ದಿಲ್ಲಿ ಪೊಲೀಸರು ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ ಟಿಎಂಸಿ ಸಂಸದರು ಮತ್ತು ವಕೀಲ ಮೇನಕಾ ಗುರುಸ್ವಾಮಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯು ನಿಷ್ಪ್ರಯೋಜಕವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾನೂನುಬಾಹಿರ ಬಂಧನ ಅಥವಾ ನಿರ್ಬಂಧಕ್ಕೆ ಒಳಗಾದ ವ್ಯಕ್ತಿಯ ಸ್ವಾತಂತ್ರ್ಯವನ್ನು ರಕ್ಷಿಸಲು ಬಳಸುವ ಸಾಂವಿಧಾನಿಕ ಪರಿಹಾರವೇ ಹೇಬಿಯಸ್ ಕಾರ್ಪಸ್. ಬಂಧಿತ ವ್ಯಕ್ತಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲು ಈ ರಿಟ್ ಅವಕಾಶ ಕಲ್ಪಿಸುತ್ತದೆ.
ಅ.11ರಂದು ನಡೆದ ವಿಶೇಷ ವಿಚಾರಣೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಸಭೆ ಸೇರುವ ಜನರನ್ನು ಕಾನೂನುಬಾಹಿರವಾಗಿ ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ದಿಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸುವಂತೆ ಹಾಗೂ ಇಂಟರ್ನೆಟ್ ಸೇವೆಗಳಿಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಸೂಚಿಸಿತ್ತು.
ಚುನಾವಣಾ ಆಯೋಗದ (EC) ಕಾರ್ಯನಿರ್ವಹಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ (CJP) ಮತ್ತು ಕೆಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದವು.
ಅ.11ರಂದು ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಇದನ್ನು ತಡೆಯಲು ಸರಕಾರ ಕಠಿಣ ಭದ್ರತಾ ಕ್ರಮಗಳನ್ನು ಕೈಗೊಂಡಿತ್ತು. ಈ ವೇಳೆ CJP ನಾಯಕ ಅಭಿಜಿತ್ ದೀಪ್ಕೆ, ವಿರೋಧ ಪಕ್ಷಗಳ ಹಲವು ನಾಯಕರು ಮತ್ತು ಯೂಟ್ಯೂಬರ್ ಧ್ರುವ್ ರಾಠೀ ಸೇರಿದಂತೆ 7,000ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.






