ಮತದಾನದ ವೀಡಿಯೊ ದೃಶ್ಯಾವಳಿ ಸಂರಕ್ಷಿಸಿಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Photo | PTI
ಹೊಸದಿಲ್ಲಿ : ಮತದಾನದ ವೀಡಿಯೊ ದೃಶ್ಯಾವಳಿಗಳನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತೀಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.
ಪ್ರತಿ ಮತಗಟ್ಟೆಗೆ ಗರಿಷ್ಠ ಸಂಖ್ಯೆಯ ಮತದಾರರನ್ನು 1,200ರಿಂದ 1,500ಕ್ಕೆ ಹೆಚ್ಚಿಸುವ ನಿರ್ಧಾರದ ವಿರುದ್ಧದ ಅರ್ಜಿಗಳು ಬಾಕಿ ಉಳಿದಿರುವ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ.
ʼಇಂದು ಪ್ರಕಾಶ್ ಸಿಂಗ್ ́ ಎಂಬವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಲು ಚುನಾವಣಾ ಆಯೋಗದ ಪರ ವಕೀಲರು ಹೆಚ್ಚಿನ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದೆ.
ಇಂದಿನಿಂದ ಮೂರು ವಾರಗಳಲ್ಲಿ ಅಫಿಡವಿಟ್ ಸಲ್ಲಿಸಲಿ, ಸಿಸಿಟಿವಿ ರೆಕಾರ್ಡಿಂಗ್ ಗಳನ್ನು ಸಂರಕ್ಷಿಸಲು ಪ್ರತಿವಾದಿಗಳಿಗೆ ನಿರ್ದೇಶಿಸುವುದು ಸೂಕ್ತ ಎಂದು ನಾವು ಭಾವಿಸುತ್ತೇವೆʼ ಎಂದು ಪೀಠವು ಹೇಳಿದೆ.
ಪ್ರತಿ ಮತಗಟ್ಟೆಯ ಗರಿಷ್ಠ ಮತದಾರರ ಸಂಖ್ಯೆಯನ್ನು ಹೆಚ್ಚಿಸುವ ನಿರ್ಧಾರವನ್ನು ಪ್ರಶ್ನಿಸಿ ́ಇಂದು ಪ್ರಕಾಶ್ʼ ಅವರು ಪಿಐಎಲ್ ಸಲ್ಲಿಸಿದ್ದರು.





