ತಮಿಳುನಾಡು | NEET ಮರುಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

Photo | NDTV
ಚೆನ್ನೈ: ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯಲ್ಲಿ 19 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಮಿಳುನಾಡಿನಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ವಿರುದ್ಧ ಹೊಸ ಪ್ರತಿಭಟನೆಗಳಿಗೆ ಕಾರಣವಾಗಿದೆ.
ಮೃತ ವಿದ್ಯಾರ್ಥಿನಿಯನ್ನು ಅನುಕೀರ್ತನಾ ಎಂದು ಗುರುತಿಸಲಾಗಿದೆ. ಈ ಹಿಂದೆ ಎರಡು ಬಾರಿ ನೀಟ್ ಪರೀಕ್ಷೆ ಬರೆದಿದ್ದ ಅನುಕೀರ್ತನಾ ಮರುಪರೀಕ್ಷೆ ಬರೆಯಲು ತಯಾರಿ ನಡೆಸಿದ್ದರು. ಇತ್ತೀಚಿನ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಅವರು ಮತ್ತೆ ಪರೀಕ್ಷೆಗೆ ಹಾಜರಾಗಬೇಕಾಗಿ ಬಂದಿದ್ದರಿಂದ ಅವರು ದುಃಖಿತರಾಗಿದ್ದರು ಎಂದು ತಿಳಿದು ಬಂದಿದೆ.
ತಮಿಳುನಾಡು ಆರಂಭದಿಂದಲೂ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡಬೇಕೆಂದು ಕೇಂದ್ರಕ್ಕೆ ಬೇಡಿಕೆ ಸಲ್ಲಿಸುತ್ತಿದ್ದು, ಈ ಘಟನೆಯು ರಾಜ್ಯದ ದೀರ್ಘಕಾಲದ ಬೇಡಿಕೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
"ಮತ್ತೊಂದು ಪರೀಕ್ಷೆಯ ಹತಾಶೆ ಅವಳನ್ನುಆತ್ಮಹತ್ಯೆಗೆ ಪ್ರೇರೇಪಿಸಿದೆ ಎಂದು ತೋರುತ್ತದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು NDTV ಗೆ ಪ್ರತಿಕ್ರಿಯಿಸಿದ್ದಾರೆ.
ಸ್ಥಳದಿಂದ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಸಾವಿಗೆ ಕಾರಣವಾದ ಸಂದರ್ಭಗಳನ್ನು ನಿರ್ಧರಿಸಲು ತನಿಖೆ ನಡೆಯುತ್ತಿದೆ.
ಈ ಘಟನೆಯ ಬಳಿಕ ಕೊಯಮತ್ತೂರಿನಲ್ಲಿ ನೀಟ್ ವಿರೋಧಿ ಪ್ರತಿಭಟನೆಗಳು ನಡೆಯುತ್ತಿದ್ದು , ನೀಟ್ ರದ್ದುಗೊಳಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ತಮಿಳುನಾಡು ಸರಕಾರ ನೀಟ್ ಪರೀಕ್ಷೆಯ ಆರಂಭದಿಂದಲೂ ವಿರೋಧಿಸುತ್ತಾ ಬಂದಿದೆ. ದುಬಾರಿ ಖಾಸಗಿ ತರಬೇತಿಯನ್ನು ಪಡೆಯಲು ಸಾಧ್ಯವಾಗುವ ಶ್ರೀಮಂತ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆಯು ಪ್ರಯೋಜನವಾಗಲಿದೆ. ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಿದ್ದರೂ, ಬಡ ಮತ್ತು ಗ್ರಾಮೀಣ ಕುಟುಂಬಗಳ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದಾಗಿ ಅವಕಾಶಗಳಿಂದ ವಂಚಿತವಾಗಲಿದ್ದಾರೆ ಎಂದು ಎಂದು ತಮಿಳನಾಡು ರಾಜ್ಯ ಸರಕಾರ ಹೇಳುತ್ತಲೇ ಬಂದಿದೆ.
ತಮಿಳುನಾಡು ವಿಧಾನಸಭೆ ನೀಟ್ ನಿಂದ ವಿನಾಯಿತಿ ಕೋರಿ ಮಸೂದೆಯನ್ನು ಅಂಗೀಕರಿಸಿತ್ತು. ಆದರೆ ಅದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಲಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಈ ಪರೀಕ್ಷೆ ಜಾರಿಯಲ್ಲಿದೆ.






