ಬ್ರಿಜ್ ಭೂಷಣ್ ಸಿಂಗ್ ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ತಿಳಿಸಿದ ದಿಲ್ಲಿ ಪೊಲೀಸರು

Brij Bhushan Sharan Singh/ Facebook
ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ಅಮಾನತುಗೊಂಡಿರುವ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಶುಕ್ರವಾರ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ದಿಲ್ಲಿಯ ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಮುಂದೆ ಪೊಲೀಸರು ಪುರಾವೆಗಳನ್ನು ಸಲ್ಲಿಸಿದರು.
" ಚಾರ್ಜ್ ಶೀಟ್ ಮಾಡಲಾದ ಅಪರಾಧಗಳಿಗಾಗಿ ಆರೋಪಿಗಳನ್ನು ಚಾರ್ಜ್ ಮಾಡಬೇಕು" ಎಂದು ಪೊಲೀಸರನ್ನು ಪ್ರತಿನಿಧಿಸುವ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ನ್ಯಾಯಾಲಯಕ್ಕೆ ತಿಳಿಸಿದರು.
ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 , 354-ಎ (ಲೈಂಗಿಕ ಕಿರುಕುಳ) ಹಾಗೂ 354-ಡಿ (ಹಿಂಬಾಲಿಸುವಿಕೆ) ಅಡಿಯಲ್ಲಿ ಆರೋಪ ಹೊರಿಸಲು ಸಾಕಷ್ಟು ಪುರಾವೆಗಳಿವೆ ಎಂದು ಶ್ರೀವಾಸ್ತವ ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.





