Tripura | ಕಟ್ಟಡವೊಂದರಲ್ಲಿ ಭಾರೀ ಸ್ಫೋಟ: ಹಲವರಿಗೆ ಗಾಯ, ಆಸ್ತಿಪಾಸ್ತಿಗೆ ಹಾನಿ

Photo | ANI
ಅಗರ್ತಲಾ: ತ್ರಿಪುರಾದ ರಾಜಧಾನಿ ಅಗರ್ತಲಾದಲ್ಲಿ ಅಪಾರ್ಟ್ಮೆಂಟ್ ಕಟ್ಟಡವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಹಲವು ಜನರು ಗಾಯಗೊಂಡಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ.
ಸಂಕಟ್ ಚೌಮುಹಾನಿ ಬಳಿಯ ಎನ್.ಎಸ್ ಅಪಾರ್ಟ್ಮೆಂಟ್ನ ಮೊದಲ ಮಹಡಿಯಲ್ಲಿ ಈ ಸ್ಫೋಟ ಸಂಭವಿಸಿದೆ. ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಬಾಂಬ್ ಪತ್ತೆ ದಳಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಸ್ಫೋಟದಲ್ಲಿ ಹಲವು ಜನರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿದ SDPO ದೇಬಾ ಪ್ರಸಾದ್, ಅಪರಾಹ್ನ 12 ಗಂಟೆ ವೇಳೆ ನಮಗೆ ಸ್ಪೋಟದ ಬಗ್ಗೆ ಮಾಹಿತಿ ಲಭಿಸಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಕೆಲವು ನಿವಾಸಿಗಳು ಇದು ಗ್ಯಾಸ್ ಸಿಲಿಂಡರ್ ಸ್ಪೋಟವಾಗಿರಬಹುದು ಎಂದು ಶಂಕಿಸಿದ್ದಾರೆ. ಸ್ಫೋಟದ ಮೂಲ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಹಾಗೂ ವಿಧಿವಿಜ್ಞಾನ ತಜ್ಞರು ತನಿಖೆಯನ್ನು ನಡೆಸುತ್ತಿದ್ದಾರೆ.




