ದಿಲ್ಲಿ ಗಲಭೆ ಪ್ರಕರಣ | ಉಮರ್ ಖಾಲಿದ್, ಶರ್ಜಿಲ್ ಇಮಾಮ್ಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ (Photo: PTI)
ಹೊಸದಿಲ್ಲಿ: 2020 ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಯುಎಪಿಎಯಡಿ ಬಂಧಿತ ಉಮರ್ ಖಾಲಿದ್, ಶರ್ಜಿಲ್ ಇಮಾಮ್ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.
ದಿಲ್ಲಿ ಗಲಭೆಗೆ ಸಂಬಂಧಿಸಿದ ಪಿತೂರಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಉಮರ್ ಖಾಲಿದ್, ಶರ್ಜಿಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇವರು ಕಳೆದ ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು, ಉಮರ್ ಖಾಲಿದ್, ಶರ್ಜಿಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಖಾಲಿದ್ ಮತ್ತು ಇಮಾಮ್ ಅವರಿಗೆ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್, ಆಪಾದಿತ ಕ್ರಿಮಿನಲ್ ಪಿತೂರಿಯಲ್ಲಿ ಅವರ ಪಾತ್ರವನ್ನು ಸಾಬೀತುಪಡಿಸುವ ಸಾಕಷ್ಟು ದಾಖಲೆಗಳನ್ನು ಪ್ರಾಸಿಕ್ಯೂಷನ್ ಸಲ್ಲಿಸಿದೆ ಎಂದು ಹೇಳಿದೆ. ಒಂದು ವರ್ಷದ ನಂತರ ಅಥವಾ ಸಂರಕ್ಷಿತ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ನಂತರ, ಅವರು ಜಾಮೀನಿಗಾಗಿ ಮತ್ತೆ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಪೀಠವು ಸ್ಪಷ್ಟಪಡಿಸಿದೆ. ಭವಿಷ್ಯದ ಯಾವುದೇ ಅರ್ಜಿಯನ್ನು ಇಂದಿನ ಆದೇಶದಿಂದ ಯಾವುದೇ ಪರಿಣಾಮ ಬೀರದೆ ಸ್ವತಂತ್ರವಾಗಿ ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.







