ವಿನೇಶ್ ಫೋಗಟ್ ಟ್ರಯಲ್ಸ್ ಪ್ರಕರಣ : WFI ಅರ್ಜಿ ಈಗ ಅಪ್ರಸ್ತುತ ಎಂದು ವಜಾಗೊಳಿಸಿದ ಸುಪ್ರೀಂ ಕೋರ್ಟ್

Photo credit: PTI
ಹೊಸದಿಲ್ಲಿ, ಜೂ. 4: ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಏಷ್ಯನ್ ಗೇಮ್ ಆಯ್ಕೆ ಟ್ರಯಲ್ಸ್ನಲ್ಲಿ ಭಾಗವಹಿಸಲು ಅನುಮತಿ ನೀಡಿದ್ದ ದಿಲ್ಲಿ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಭಾರತದ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್ಐ) ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ.
ಅನಂತರ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಅರ್ಜಿ ತನ್ನ ಪ್ರಾಮುಖ್ಯತೆ ಕಳೆದುಕೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅರವಿಂದ ಕುಮಾರ್ ಅವರನ್ನು ಒಳಗೊಂಡ ಪೀಠ ಉಚ್ಚ ನ್ಯಾಯಾಲಯದ ಅಭಿಪ್ರಾಯಗಳನ್ನು ಪರಿಶೀಲಿಸಲು ನಿರಾಕರಿಸಿತು. ಅಲ್ಲದೆ, ಉಚ್ಚ ನ್ಯಾಯಾಲಯ ನೀಡಿದ್ದ ಆದೇಶದ ಅಂಶಗಳನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದೆ ಎಂದು ಪರಿಗಣಿಸಬಾರದು ಎಂದು ಸ್ಪಷ್ಟಪಡಿಸಿತು. ಈ ವಿಷಯಕ್ಕೆ ಸಂಬಂಧಿಸಿದ ಉಳಿದ ಎಲ್ಲಾ ಪ್ರಶ್ನೆಗಳನ್ನು ಹಾಗೆ ಉಳಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ತಿಳಿಸಿತು.
ಭಾರತದ ಕುಸ್ತಿ ಒಕ್ಕೂಟದ ಪರವಾಗಿ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಡಿ.ಎನ್. ಗೋಬರ್ಧನ್ ಅವರು, ಫೋಗಟ್ ಅವರು ಆಯ್ಕೆ ಟ್ರಯಲ್ಸ್ನಲ್ಲಿ ಭಾಗವಹಿಸಿದ್ದರು. ಆದರೆ, ಅರ್ಹರಾಗಲು ವಿಫಲರಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
‘‘ಅವರು ಯಶಸ್ವಿಯಾಗಲಿಲ್ಲ. ಆದರೆ, ಭಾರೀ ಗದ್ದಲ ಎಬ್ಬಿಸಿದರು’’ ಎಂದು ಅವರು ಪೀಠಕ್ಕೆ ತಿಳಿಸಿದರು.
ಈ ವಿಷಯ ಈಗ ಅಪ್ರಸ್ತುತವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಿಸಿತು.




