ಮೂಕಿಹಾಳ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ; ಕೊಳಚೆ ನೀರಿನಿಂದ ಗ್ರಾಮಸ್ಥರ ಬದುಕು ನರಕ!

ತಾಳಿಕೋಟೆ : ತಾಲೂಕಿನ ಮೂಕಿಹಾಳ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಮೂಲಸೌಕರ್ಯಗಳ ಕೊರತೆಯಿಂದ ಗ್ರಾಮಸ್ಥರು ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಹನುಮಾನ ದೇವಸ್ಥಾನದ ಮುಂಭಾಗದಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಕೊಳಚೆ ನೀರು ಮುಖ್ಯ ರಸ್ತೆಯ ಮೇಲೆಯೇ ಹರಿಯುತ್ತಿದೆ. ರಸ್ತೆಯಲ್ಲಿ ನಿರ್ಮಾಣವಾಗಿರುವ ತಗ್ಗು ಗುಂಡಿಗಳಲ್ಲಿ ತ್ಯಾಜ್ಯ ನೀರು ಸಂಗ್ರಹಗೊಂಡು ದುರ್ವಾಸನೆ ಬೀರುತ್ತಿದ್ದು, ಜನಸಂಚಾರಕ್ಕೂ ತೊಂದರೆಯಾಗಿದೆ.
ಕಲ್ಲದೇವನಹಳ್ಳಿ ಹಾಗೂ ಹರನಾಳ ಗ್ರಾಮಗಳಿಗೆ ತೆರಳುವ ವಾಹನ ಸವಾರರು ಇದೇ ಮಾರ್ಗವನ್ನು ಅವಲಂಬಿಸಿದ್ದು, ರಸ್ತೆಯ ಅವ್ಯವಸ್ಥೆಯಿಂದ ಪ್ರತಿನಿತ್ಯ ಪರದಾಡುವಂತಾಗಿದೆ. ಚರಂಡಿ ನೀರಿನೊಂದಿಗೆ ಕಸ, ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಗೊಂಡು ಪರಿಸರ ಗಬ್ಬೆದ್ದು ನಾರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕೊಳಚೆ ನೀರು ನಿಂತಿರುವುದರಿಂದ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್, ಬ್ಲೀಚಿಂಗ್ ಪೌಡರ್ ಸಿಂಪಡಣೆ ಸೇರಿದಂತೆ ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗ್ರಾಮದ ಕುಡಿಯುವ ನೀರಿನ ನಳದ ಸಮೀಪದಲ್ಲೇ ಘನತ್ಯಾಜ್ಯ ರಾಶಿ ಸಂಗ್ರಹಗೊಂಡಿದ್ದು, ಅಲ್ಲಿಯೂ ಚರಂಡಿ ನೀರು ನಿಂತಿದೆ. ಇದೇ ನಳದಿಂದ ನೂರಾರು ಜನರು ಕುಡಿಯುವ ನೀರು ಪಡೆಯುತ್ತಿರುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಭೀತಿ ಎದುರಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಚರಂಡಿ ನಿರ್ಮಾಣ ಹಾಗೂ ಸ್ವಚ್ಛತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಕೈಗೊಂಡು, ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ಹಾಗೂ ಬ್ಲೀಚಿಂಗ್ ಸಿಂಪಡಣೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹಳ್ಳಿಗಳ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ಅನುದಾನ ನೀಡುತ್ತಿದ್ದರೂ, ಗ್ರಾಮಗಳಿಗೆ ಮೂಲಸೌಕರ್ಯಗಳು ತಲುಪುತ್ತಿಲ್ಲ. ಅನುದಾನ ಎಲ್ಲಿ ಬಳಕೆಯಾಗುತ್ತಿದೆ ಎಂಬುದೇ ತಿಳಿಯದಂತಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಸ್ಥರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.






