ಮಸ್ಕಿ ಅಲ್ಪಸಂಖ್ಯಾತರ ಸಮುದಾಯ ಭವನದ ಕಳಪೆ ಕಾಮಗಾರಿ; ಶಾಸಕರಿಂದ ತರಾಟೆ

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಅಲ್ಪಸಂಖ್ಯಾತರ ಸಮುದಾಯದ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಉಪಯೋಗಕ್ಕಾಗಿ ನಿರ್ಮಾಣಗೊಳ್ಳುತ್ತಿರುವ ಸಮುದಾಯ ಭವನ ಕಾಮಗಾರಿ ಕಳಪೆ ಗುಣಮಟ್ಟ ಮತ್ತು ವಿಳಂಬದ ಆರೋಪಗಳಿಂದ ಮತ್ತೆ ಸುದ್ದಿಯಲ್ಲಿದೆ. ಹಲವು ವರ್ಷಗಳಿಂದ ನಿರೀಕ್ಷೆಯಲ್ಲಿದ್ದ ಈ ಯೋಜನೆ ಇನ್ನೂ ಪೂರ್ಣಗೊಳ್ಳದೇ ಇರುವುದರಿಂದ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಸ್ಕಿ ಪಟ್ಟಣದ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವ ಉದ್ದೇಶದಿಂದ 2021-22 ಹಾಗೂ 2022-23ನೇ ಸಾಲಿನಲ್ಲಿ ಶಾಸಕರ ಅನುದಾನದಿಂದ ಸುಮಾರು 20 ಲಕ್ಷ ರೂ. ಮಂಜೂರು ಮಾಡಲಾಗಿತ್ತು. ಕಟ್ಟಡ ನಿರ್ಮಾಣದ ಜವಾಬ್ದಾರಿಯನ್ನು ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ಸಿಂಧನೂರು ವಿಭಾಗಕ್ಕೆ ವಹಿಸಲಾಗಿತ್ತು.
ಆದರೆ ಕಾಮಗಾರಿ ಆರಂಭವಾಗಿ ಸುಮಾರು ಮೂರು ವರ್ಷಗಳು ಕಳೆದರೂ ಕಟ್ಟಡ ಇನ್ನೂ ಪೂರ್ಣಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಕಟ್ಟಡದ ಕೆಲವು ಭಾಗಗಳಲ್ಲಿ ಗುಣಮಟ್ಟದ ಕೊರತೆ, ನಿಧಾನಗತಿಯ ಕೆಲಸ ಹಾಗೂ ನಿರ್ವಹಣಾ ಲೋಪಗಳ ಬಗ್ಗೆ ಸಾರ್ವಜನಿಕರು ಪ್ರಶ್ನೆ ಎತ್ತಿದ್ದಾರೆ. ಯೋಜನೆಗೆ ಅನುದಾನ ಬಿಡುಗಡೆಯಾದರೂ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಕಾಮಗಾರಿಯ ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿದರು. ಪರಿಶೀಲನೆ ವೇಳೆ ಕಾಮಗಾರಿ ನಿರ್ವಹಣೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಸಾರ್ವಜನಿಕರ ಹಣದಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸ್ಥಳೀಯರ ಪ್ರಕಾರ, ಸಮುದಾಯ ಭವನ ನಿರ್ಮಾಣ ಶೀಘ್ರ ಪೂರ್ಣಗೊಂಡರೆ ಅಲ್ಪಸಂಖ್ಯಾತ ಸಮುದಾಯದ ಹಲವು ಸಾಮಾಜಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಕೂಲವಾಗಲಿದೆ. ಹೀಗಾಗಿ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಈ ಕುರಿತು ಮಾತನಾಡಿದ ಅಲ್ಪಸಂಖ್ಯಾತರ ನಗರ ಘಟಕದ ಅಧ್ಯಕ್ಷ ನಿಸಾರ್ ಅಹ್ಮದ್ ಹಾಗೂ ತಾಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಮೆಹಬೂಬ್ ಸಾಬ್ ಮುದಾಪುರ್, ಕಾಮಗಾರಿ ವಿಳಂಬ ಮತ್ತು ಗುಣಮಟ್ಟದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
2021-23 ಹಾಗೂ 2023-24ನೇ ಸಾಲಿನಲ್ಲಿ ಶಾಸಕರ ಅನುದಾನದಿಂದ 10 ಲಕ್ಷ ರೂ. ಬಿಡುಗಡೆ ಮಾಡಲಾಗಿತ್ತು. ಅದರಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಅಲ್ಪಸಂಖ್ಯಾತರ ಇಲಾಖೆಯಿಂದ ಹೆಚ್ಚುವರಿಯಾಗಿ 40 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಸಮುದಾಯ ಭವನದ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸಂಬಂಧಿತ ಅಧಿಕಾರಿಗಳಿಗೆ ಗುಣಮಟ್ಟದ ಕಟ್ಟಡ ನಿರ್ಮಾಣ ಮಾಡಲು ಸೂಚನೆ ನೀಡಿದ್ದೇನೆ.
-ಆರ್.ಬಸನಗೌಡ ತುರುವಿಹಾಳ, ಶಾಸಕ






