ಪ್ರವಾಸಿ ಮಂದಿರದ ಸುತ್ತ ಕೊಳಚೆ, ದುರ್ನಾತ: ಸಾರ್ವಜನಿಕರಿಗೆ ಸಂಕಷ್ಟ

ಬಸವಕಲ್ಯಾಣ: ನಗರದ ತ್ರಿಪುರಾಂತ ಸಮೀಪದಲ್ಲಿರುವ ಪ್ರವಾಸಿ ಮಂದಿರದ ಸುತ್ತಮುತ್ತ ಕೊಳಚೆ ಸಂಗ್ರಹಗೊಂಡು ದುರ್ನಾತ ಬೀರುತ್ತಿದ್ದು, ಅತ್ಯಂತ ಅಸ್ವಚ್ಛ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಎದುರಾಗಿದೆ.
ನಗರ ಪ್ರದೇಶದಿಂದ ತಹಶೀಲ್ದಾರ್ ಕಚೇರಿ ದೂರದಲ್ಲಿರುವುದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಕೆಲವು ವರ್ಷಗಳಿಂದ ಗ್ರಾಮ ಆಡಳಿತಾಧಿಕಾರಿಗಳು ಈ ಪ್ರವಾಸಿ ಮಂದಿರದಲ್ಲಿ ಕುಳಿತು ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳ ನೂರಾರು ಜನರು ಪ್ರತಿದಿನ ವಿವಿಧ ಕೆಲಸಗಳಿಗಾಗಿ ಇಲ್ಲಿಗೆ ಬರುತ್ತಿದ್ದಾರೆ.
ಆದರೆ, ಪ್ರವಾಸಿ ಮಂದಿರದ ಸುತ್ತಮುತ್ತ ತಿಪ್ಪೆಗುಂಡಿಯಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ತೀವ್ರ ದುರ್ವಾಸನೆ ಸಾರ್ವಜನಿಕರನ್ನು ಕಾಡುತ್ತಿದೆ. ವಿಶೇಷವಾಗಿ ಪಿಂಚಣಿ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಬರುವ ವಯೋವೃದ್ಧರು ಮತ್ತು ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.
ಪ್ರವಾಸಿ ಮಂದಿರದ ಬಳಿ ಸಾರ್ವಜನಿಕ ಶೌಚಾಲಯದ ವ್ಯವಸ್ಥೆ ಇಲ್ಲದ ಕಾರಣ ಕೆಲವರು ಕಟ್ಟಡದ ಪಕ್ಕದಲ್ಲೇ ಮಲಮೂತ್ರ ವಿಸರ್ಜನೆ ಮಾಡುತ್ತಿದ್ದಾರೆ. ಇದರಿಂದ ಇಲ್ಲಿಗೆ ಬರುವ ಮಹಿಳೆಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಜುಗರ ಅನುಭವಿಸುವಂತಾಗಿದೆ. ದುರ್ವಾಸನೆಯಿಂದ ಮೂಗು ಮುಚ್ಚಿ ಕೊಂಡರೂ ವಾಂತಿ ಬರುವಂತಹ ಪರಿಸ್ಥಿತಿ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಪ್ರವಾಸಿ ಮಂದಿರದ ಕಟ್ಟಡವೂ ಶಿಥಿಲಾವಸ್ಥೆಗೆ ತಲುಪಿದ್ದು, ಇದೇ ಕಟ್ಟಡದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟಡದ ಸುತ್ತಲಿನ ಕೊಳಚೆಯಿಂದ ಸೊಳ್ಳೆಗಳ ಕಾಟವೂ ಹೆಚ್ಚಾಗಿದ್ದು, ಸಾರ್ವಜನಿಕರು ಮತ್ತು ಅಧಿಕಾರಿಗಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಎದುರಾಗಿದೆ.
ಈ ಪ್ರವಾಸಿ ಮಂದಿರವನ್ನು ಲೋಕೋಪಯೋಗಿ ಇಲಾಖೆ ನಿರ್ಮಿಸಿದ್ದು, ಪ್ರಸ್ತುತ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಎರಡೂ ಇಲಾಖೆಗಳು ಕಟ್ಟಡ ಹಾಗೂ ಪರಿಸರದ ಸಮರ್ಪಕ ನಿರ್ವಹಣೆಗೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕಂದಾಯ ಇಲಾಖೆಯ ಮೇಲಾಧಿಕಾರಿಗಳು ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಕ್ತ ಪರ್ಯಾಯ ಸ್ಥಳದ ವ್ಯವಸ್ಥೆ ಮಾಡಬೇಕು. ಲೋಕೋಪಯೋಗಿ ಇಲಾಖೆಯು ಶಿಥಿಲ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸುವುದರೊಂದಿಗೆ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪ್ರವಾಸಿ ಮಂದಿರದ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಮಳೆ ಬಂದಾಗ ಅಧಿಕಾರಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೆಣ್ಣುಮಕ್ಕಳು ಸೇರಿದಂತೆ ನೂರಾರು ಜನರು ಪ್ರತಿದಿನ ವಿವಿಧ ಕೆಲಸಗಳಿಗಾಗಿ ಇಲ್ಲಿಗೆ ಬರುತ್ತಾರೆ. ಆದರೆ, ಕಟ್ಟಡದ ಬಳಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವುದರಿಂದ ಕಚೇರಿಯಲ್ಲಿ ನಿಲ್ಲಲೂ ಸಾಧ್ಯವಾಗುತ್ತಿಲ್ಲ.’’
-ಅರ್ಫಾತ್ ಅಹಮದ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ತಾಲೂಕು ಘಟಕದ ಅಧ್ಯಕ್ಷ
ಪ್ರವಾಸಿ ಮಂದಿರದಲ್ಲಿ ಕಳೆದ ಕೆಲವು ವರ್ಷಗಳಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಕಟ್ಟಡದ ನಿರ್ವಹಣೆಯ ಜವಾಬ್ದಾರಿಯನ್ನೂ ಅವರು ವಹಿಸಿಕೊಳ್ಳಬೇಕಿತ್ತು. ನಮ್ಮ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಈಗಿರುವ ಶಿಥಿಲ ಕಟ್ಟಡವನ್ನು ತೆರವುಗೊಳಿಸಿ ನೂತನ ಕಟ್ಟಡ ನಿರ್ಮಿಸಲಾಗುವುದು.
-ರಮೇಶ್, ಎಇಇ, ಲೋಕೋಪಯೋಗಿ ಇಲಾಖೆ
ತಹಶೀಲ್ದಾರ್ ಕಚೇರಿ ನಗರ ಪ್ರದೇಶದಿಂದ ದೂರದಲ್ಲಿರುವುದರಿಂದ ವಯೋವೃದ್ಧರು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಗ್ರಾಮ ಆಡಳಿತಾಧಿಕಾರಿಗಳು ಪ್ರವಾಸಿ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ, ಅವರಿಗೆ ಬೇರೆ ಸ್ಥಳದಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು.
-ದತ್ತಾತ್ರೇಯ ಜೆ. ಗಾದಾ, ತಹಶೀಲ್ದಾರ್, ಬಸವಕಲ್ಯಾಣ
ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಕ್ತ ಸ್ಥಳದ ವ್ಯವಸ್ಥೆ ಇಲ್ಲದ ಕಾರಣ ಪ್ರವಾಸಿ ಮಂದಿರದಲ್ಲಿಯೇ ಕಾರ್ಯನಿರ್ವಹಿಸುತ್ತಿದ್ದಾರೆ. ಮೇಲಾಧಿಕಾರಿಗಳು ಸೂಕ್ತ ಜಾಗ ಗುರುತಿಸಿ, ಗ್ರಾಮ ಆಡಳಿತಾಧಿಕಾರಿಗಳಿಗೆ ಅನುಕೂಲ ಮಾಡಿಕೊಡಬೇಕು.
-ಕಾಶಿನಾಥ್,
ಗ್ರಾಮ ಆಡಳಿತಾಧಿಕಾರಿಗಳ ಸಂಘದ ತಾಲೂಕು ಘಟಕದ ಅಧ್ಯಕ್ಷ






