20 ದಿನಗಳಿಂದ ಶುದ್ಧ ನೀರಿನ ಘಟಕ ಸ್ಥಗಿತ: ಮಲ್ಲಾಪುರ ಗ್ರಾಮಸ್ಥರ ಆಕ್ರೋಶ

ಸಂಡೂರು: ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 72 ಮಲ್ಲಾಪುರ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಕಳೆದ 20 ದಿನಗಳಿಂದ ಸಂಪೂರ್ಣ ಸ್ಥಗಿತಗೊಂಡಿದ್ದು, ಗ್ರಾಮಸ್ಥರು ಶುದ್ಧ ಕುಡಿಯುವ ನೀರಿನ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಬಗೆಹರಿಯದಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ನಿವಾಸಿಗಳು ಹಾಗೂ ಮಾಜಿ ಗ್ರಾಪಂ ಸದಸ್ಯ ಬಸವರಾಜ್ ನೀಡಿದ ಮಾಹಿತಿಯ ಪ್ರಕಾರ, ಸುಮಾರು ಹತ್ತು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ವಿದ್ಯುತ್ ಸಂಪರ್ಕ ಹಾಗೂ ಮೋಟಾರ್ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳು ಮುಂದುವರಿದಿವೆ. ಈ ಕುರಿತು ಪಿಡಿಒ ಮತ್ತು ಸಂಬಂಧಿಸಿದ ಸಿಬ್ಬಂದಿಗೆ ಅನೇಕ ಬಾರಿ ಮಾಹಿತಿ ನೀಡಿದ್ದರೂ ಶಾಶ್ವತ ಪರಿಹಾರ ಕಂಡುಬಂದಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಮೋಟಾರ್‌ಗಳು ಹಗಲಿನ ವೇಳೆಯಲ್ಲಿ ಕಾರ್ಯನಿರ್ವಹಿಸದೆ, ಕೇವಲ ರಾತ್ರಿ ವೇಳೆಯಲ್ಲಿ ಮಾತ್ರ ಚಾಲನೆಯಲ್ಲಿರುತ್ತಿವೆ ಎಂಬ ವಿಷಯವನ್ನು ಹತ್ತು ತಿಂಗಳ ಹಿಂದೆಯೇ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಪರಿಣಾಮ ಇಂದು ಸಂಪೂರ್ಣ ಘಟಕವೇ ಸ್ಥಗಿತಗೊಂಡು ಗ್ರಾಮಸ್ಥರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದರ ಜೊತೆಗೆ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿಯೂ ಸ್ವಚ್ಛತೆ ನಿರ್ವಹಣೆ ಅತ್ಯಂತ ಕಳಪೆಯಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ವರ್ಷಗಳಿಂದ ಘಟಕಗಳ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆದಿಲ್ಲ. ನೀರಿನ ಶುದ್ಧೀಕರಣ ಘಟಕಗಳ ಒಳಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಶುಚಿತ್ವ ಕಂಡುಬರುತ್ತಿದ್ದು, ಸಾರ್ವಜನಿಕ ಆರೋಗ್ಯದ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.
ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಸಾವಿರಾರು ಜನರು ಇದೇ ಘಟಕಗಳಿಂದ ದೊರೆಯುವ ನೀರನ್ನು ಕುಡಿಯುತ್ತಿರುವುದರಿಂದ ಘಟಕಗಳ ಸ್ವಚ್ಛತೆ ಮತ್ತು ನಿರ್ವಹಣೆ ಅತ್ಯಂತ ಅಗತ್ಯವಾಗಿದೆ. ಆದರೆ ಗುತ್ತಿಗೆದಾರರು ಹಾಗೂ ಘಟಕ ನಿರ್ವಹಣೆಗೆ ನೇಮಕಗೊಂಡಿರುವ ಸಹಾಯಕರು ತಮ್ಮ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.
ಸರಕಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಸ್ಥಗಿತಗೊಂಡಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಬೇಕು. ಜೊತೆಗೆ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶುದ್ಧ ನೀರಿನ ಘಟಕಗಳ ಸ್ವಚ್ಛತೆ ಮತ್ತು ನಿರ್ವಹಣೆಯ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಕರ್ತವ್ಯಲೋಪ ಎಸಗಿರುವ ಗುತ್ತಿಗೆದಾರರು ಹಾಗೂ ಸಿಬ್ಬಂದಿಗೆ ನೋಟಿಸ್ ನೀಡಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಮಸ್ಯೆ ಶೀಘ್ರ ಪರಿಹಾರವಾಗದಿದ್ದರೆ ಗ್ರಾಮಸ್ಥರು ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದು, ಸಂಬಂಧಪಟ್ಟ ಇಲಾಖೆಗಳು ತಕ್ಷಣ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗುತ್ತಿಗೆ ಸಂಸ್ಥೆಯಿಂದ ನಿರ್ವಹಣೆಯಲ್ಲಿ ಲೋಪ: ಇಒ ನಿಡುಗುರ್ತಿ ಗ್ರಾಪಂ ವ್ಯಾಪ್ತಿಯ 72 ಮಲ್ಲಾಪುರ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದ ಸಮಸ್ಯೆ ನಮ್ಮ ಗಮನಕ್ಕೆ ಬಂದಿದೆ. ಕಳೆದ ಐದರಿಂದ ಆರು ವರ್ಷಗಳಿಂದ ಈ ಘಟಕದ ನಿರ್ವಹಣೆಯನ್ನು ಖಾಸಗಿ ಗುತ್ತಿಗೆ ಸಂಸ್ಥೆಗೆ ವಹಿಸಲಾಗಿತ್ತು. ಆದರೆ ನಿರ್ವಹಣೆಯಲ್ಲಿ ಕಂಡುಬಂದಿರುವ ಲೋಪಗಳು ಮತ್ತು ಸಾರ್ವಜನಿಕರಿಂದ ಬಂದಿರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.
ಈ ಕುರಿತು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಅನುಮತಿ ಪಡೆದು ಘಟಕದ ನಿರ್ವಹಣೆಯನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ದೊರೆಯುವಂತೆ ಹಾಗೂ ಘಟಕಗಳ ಸ್ವಚ್ಛತೆ ಮತ್ತು ನಿರ್ವಹಣೆ ಸಮರ್ಪಕವಾಗಿ ನಡೆಯುವಂತೆ ಆದಷ್ಟು ಬೇಗ ಅಗತ್ಯ ಕ್ರಮ ಕೈಗೊಂಡು ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸಲಾಗುವುದು ಎಂದು ಸಂಡೂರು ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಹೇಳಿದ್ದಾರೆ.
ಶುದ್ಧ ಕುಡಿಯುವ ನೀರು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದೆ. ಆದರೆ ಮಲ್ಲಾಪುರ ಗ್ರಾಮದಲ್ಲಿ ಕಳೆದ 20 ದಿನಗಳಿಂದ ಶುದ್ಧ ನೀರಿನ ಘಟಕ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆ ಪರಿಹಾರವಾಗಿಲ್ಲ. ಇದರ ಜೊತೆಗೆ ಘಟಕಗಳ ಸ್ವಚ್ಛತೆ ಮತ್ತು ನಿರ್ವಹಣೆಯಲ್ಲಿಯೂ ಗಂಭೀರ ನಿರ್ಲಕ್ಷ್ಯ ಕಂಡುಬರುತ್ತಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಘಟಕವನ್ನು ಪುನರಾರಂಭಿಸಬೇಕು ಹಾಗೂ ನಿರ್ವಹಣೆಯಲ್ಲಿ ಲೋಪ ಎಸಗಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು.
-ಸ್ವಾಮಿ, ಮಲ್ಲಾಪುರ ಗ್ರಾಮದ ಗ್ರಾಮಸ್ಥ






