ವೀರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಘೋಷಣೆ
ಕೊಡಗಿನ ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ

ಮಡಿಕೇರಿ, ಮಾ.7: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಮಂಡಿಸಿದ ದಾಖಲೆಯ 16ನೇ ಬಜೆಟ್‌ನಲ್ಲಿ ಕೊಡಗು ಜಿಲ್ಲೆಗೆ ಆರೋಗ್ಯ ಕ್ಷೇತ್ರದಲ್ಲಿ ಬಂಪರ್ ಕೊಡುಗೆ ನೀಡಲಾಗಿದೆ.
ಅತೀ ಹೆಚ್ಚು ಕಾರ್ಮಿಕರು, ಹಿಂದುಳಿದ ವರ್ಗ, ಆದಿವಾಸಿಗಳು ಜೀವನ ನಡೆಸುತ್ತಿರುವ ವೀರಾಜಪೇಟೆ ತಾಲೂಕಿನಲ್ಲಿ ತಾಲೂಕು ಕೇಂದ್ರವಾದ ವೀರಾಜಪೇಟೆ ಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದೆಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.
ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು. ಕುಶಾಲನಗರ ತಾಲೂಕು ಆಸ್ಪತ್ರೆಯನ್ನು ನವೀಕರಣಗೊಳಿಸಲಾಗುವುದು. ರಾಜ್ಯದ 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದೆಂದು ಘೋಷಣೆ ಮಾಡಲಾಗಿದ್ದು, ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿಯೂ ಅಲೈಡ್ ಹೆಲ್ತ್ ಸೈನ್ ಕೋರ್ಸ್ ಪ್ರಾರಂಭವಾಗುವ ನಿರೀಕ್ಷೆ ಇದೆ.
2024-25ನೇ ಸಾಲಿನಲ್ಲಿ ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕು ಪ್ರಜಾ ಸೌಧ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ಮಾಹಿತಿ ನೀಡಲಾಗಿದೆ.
ಕೂಡಿಗೆ ಕ್ರೀಡಾ ಶಾಲೆಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 3 ಕೋಟಿ ರೂ. ಅನುದಾನ, K.SHIP-4 ಯೋಜನೆಯಡಿ ಮಡಿಕೇರಿ-ದೋಣಿಗಲ್ (NH75)(ಮಾದಪುರ ಸೋಮವಾರಪೇಟೆ, ಶನಿವಾರಸಂತೆ ಕೊಡ್ಲಿಪೇಟೆ ಮಾರ್ಗ) 95 ಕಿ.ಮೀ. ರಸ್ತೆ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ಭೂಕುಸಿತ ತಡೆಯುವ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯ ವೀರಾಜಪೇಟೆ, ಪೊನ್ನಂಪೇಟೆ ಮತ್ತು ಮಡಿಕೇರಿ ತಾಲೂಕಿನಲ್ಲಿ ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು 20 ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲಾಗುವುದೆಂದು ಘೋಷಣೆ ಮಾಡಲಾಗಿದೆ.
ರಾಜ್ಯದ ಆಯ್ದ ಹತ್ತು ಜಿಲ್ಲೆಗಳಲ್ಲಿನ ಪ್ರವಾಸಿತಾಣದ ಅಭಿವೃದ್ಧಿಗೆ (2025-26) 50 ಕೋಟಿ ರೂ. ಅನುದಾನ ನೀಡಲಾಗುವುದೆಂದು ಘೋಷಣೆ ಮಾಡಲಾಗಿದ್ದು, ಜಿಲ್ಲೆ ಮತ್ತು ಪ್ರವಾಸಿ ತಾಣಗಳ ಹೆಸರನ್ನು ಉಲ್ಲೇಖಿಸಿಲ್ಲ.
ವನ್ಯ ಪ್ರಾಣಿಗಳ ಹಾವಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನವನ್ನು 15 ಲಕ್ಷ ರೂ.ಯಿಂದ 20 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. 150 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಕಾಮಗಾರಿಗಳಿಗಾಗಿ 2025-26ನೇ ಸಾಲಿನಲ್ಲಿ 50 ಕೋಟಿ ರೂ. ಮೀಸರಿಸಲಾಗಿದೆ ಎಂದು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಅರಣ್ಯ, ಅರಣ್ಯದಂಚಿನಲ್ಲಿ ವಾಸಿಸುವ ವಿವಿಧ ಜನಾಂಗಗಳ ಅಭಿವೃದ್ಧಿಗಾಗಿ ಯೋಜನೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿಗೆ ತಲಾ 3 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಆದರೆ ಕೊಡಗು ಜಿಲ್ಲೆಯ ಮಡಿಕೇರಿ ಕ್ರೀಡಾಂಗಣಕ್ಕೆ ಯಾವುದೇ ಅನುದಾನವನ್ನು ಮೀಸಲಿಟ್ಟಿಲ್ಲ. ಪ್ರತೀ ಬಾರಿಯಂತೆ ಈ ಬಾರಿಯೂ ನಿರೀಕ್ಷೆ ಹುಸಿಯಾಗಿದೆ. ಎಂದು ಕ್ರೀಡಾಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.







