ಭಾಲ್ಕಿ: ತರಕಾರಿ ಮಾರುಕಟ್ಟೆಯಲ್ಲಿ ಸ್ವಚ್ಛತೆ ಮರೀಚಿಕೆ; ರೋಗದ ಭೀತಿ

ಭಾಲ್ಕಿ: ಪಟ್ಟಣದ ತರಕಾರಿ ಮಾರುಕಟ್ಟೆಯಲ್ಲಿ ಕಸದ ರಾಶಿ ಹೆಚ್ಚಾಗಿದ್ದು, ಸ್ವಚ್ಛತೆ ಕಾಪಾಡುವಲ್ಲಿ ಪುರಸಭೆ ನಿರ್ಲಕ್ಷ್ಯ ವಹಿಸಿದೆ. ಮಾರುಕಟ್ಟೆ ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿದ್ದು, ದುರ್ವಾಸನೆ ಹರಡುವುದರಿಂದ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ.
ತರಕಾರಿ ಮಾರಾಟದ ವೇಳೆ ಸಂಗ್ರಹವಾಗುವ ಹಾಳಾದ
ತರಕಾರಿಗಳು, ಎಲೆಗಳು ಹಾಗೂ ಇತರ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡದ ಪರಿಣಾಮ ಮಾರುಕಟ್ಟೆ ಪ್ರದೇಶದಲ್ಲಿ ಕಸದ ರಾಶಿ ಹೆಚ್ಚಾಗುತ್ತಿದೆ. ಇದರಿಂದ ದುರ್ವಾಸನೆ ಹರಡುವುದರ ಜತೆಗೆ ಸೊಳ್ಳೆ, ನೊಣಗಳ ಕಾಟವೂ ಹೆಚ್ಚಿದ್ದು, ರೋಗಗಳು ಹರಡುವ ಆತಂಕ ಎದುರಾಗಿದೆ.
ಪ್ರತಿನಿತ್ಯ ತರಕಾರಿ ಖರೀದಿಗಾಗಿ ಮಾರುಕಟ್ಟೆಗೆ ಬರುವ ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಈ ಅವ್ಯವಸ್ಥೆಯಿಂದ ತೊಂದರೆ ಅನುಭವಿಸುವಂತಾಗಿದೆ. ನೂರಾರು ಜನರು ಓಡಾಡುವ ಪ್ರಮುಖ ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಗತ್ಯ. ಆದರೆ, ಕಸದ ರಾಶಿ ಹೆಚ್ಚಾಗುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸ್ವಚ್ಛತಾ ಕಾರ್ಯ ಕೇವಲ ಹೆಸರಿಗಷ್ಟೇ ಸೀಮಿತವಾಗಿದೆಯೇ ಎಂಬ ಪ್ರಶ್ನೆಯೂ ಮೂಡಿದೆ.
ಪುರಸಭೆ ಅಧಿಕಾರಿಗಳು ತಕ್ಷಣ ಮಾರುಕಟ್ಟೆ ಆವರಣದಲ್ಲಿರುವ ಕಸ ತೆರವುಗೊಳಿಸಿ, ಪ್ರತಿದಿನ ನಿಯಮಿತವಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಕಸ ಸಂಗ್ರಹಿಸಲು ಸೂಕ್ತವ್ಯವಸ್ಥೆ ಕಲ್ಪಿಸುವುದರ ಜತೆಗೆ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ತರಕಾರಿ ಮಾರುಕಟ್ಟೆಯ ಅವ್ಯವಸ್ಥೆಗೆ ಪುರಸಭೆ ಅಧಿಕಾರಿಗಳು ಕೂಡಲೇ ಕಡಿವಾಣ ಹಾಕಬೇಕಿದೆ. ಸ್ವಚ್ಛ ಭಾಲ್ಕಿ ನಿರ್ಮಾಣದ ಮಾತು ಕಾರ್ಯರೂಪಕ್ಕೆ ಬರಬೇಕಾದರೆ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಿದೆ.
ಪುರಸಭೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆರೋಗ್ಯಕರ ವಾತಾವರಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು. ಬೇಡವಾದ ವಸ್ತುಗಳನ್ನು ನಿರ್ಜನ ಪ್ರದೇಶದಲ್ಲಿ ಹಾಕಬೇಕು.
<ದಿಲೀಪ್ ಶೇರಿಕಾರ್
ಸಾಮಾಜಿಕ ಕಾರ್ಯಕರ್ತ, ಭಾಲ್ಕಿ






