ಭಾಲ್ಕಿ: ಅಕ್ರಮ ಚಟುವಟಿಕೆಗಳ ತಾಣವಾದ ಸರಕಾರಿ ಕಲ್ಯಾಣ ಮಂಟಪ!
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಭಾಲ್ಕಿ: ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಕಡಿಮೆ ವೆಚ್ಚದಲ್ಲಿ ಮದುವೆ, ಸಭೆ-ಸಮಾರಂಭಗಳನ್ನು ಆಯೋಜಿಸಲು ಅನುಕೂಲವಾಗಲೆಂದು ಸರಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸರಕಾರಿ ಕಲ್ಯಾಣ ಮಂಟಪ ಇದೀಗ ನಿರ್ಲಕ್ಷ್ಯಕ್ಕೆ ಒಳಗಾಗಿ ಕುಡುಕರ ಅಡ್ಡೆಯಾಗಿ ಹಾಗೂ ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.
2005-06ನೇ ಸಾಲಿನಲ್ಲಿ 12.50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಕಲ್ಯಾಣ ಮಂಟಪ ಸಾರ್ವಜನಿಕರ ಬಳಕೆಗೆ ಸಿಗದೆ ಪಾಳು ಬಿದ್ದಿದೆ. ಕಟ್ಟಡದ ಆವರಣದಲ್ಲಿ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಲೋಟಗಳು ಹಾಗೂ ಇತರ ತ್ಯಾಜ್ಯ ವಸ್ತುಗಳು ರಾಶಿ ಬಿದ್ದಿವೆ. ಇದರಿಂದ ಕಟ್ಟಡದ ಸುತ್ತಮುತ್ತಲಿನ ಪರಿಸರ ಅಸ್ವಚ್ಛತೆಯಿಂದ ಕೂಡಿದೆ.
ರಾತ್ರಿ ವೇಳೆ ಕೆಲವರು ಇಲ್ಲಿ ಮದ್ಯಪಾನ ಮಾಡುವುದು, ಅನಗತ್ಯವಾಗಿ ಗುಂಪು ಸೇರುವುದು ಸೇರಿದಂತೆ ಅಸಭ್ಯ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ. ಇದರಿಂದ ಸಾರ್ವಜನಿಕ ಆಸ್ತಿಯ ದುರುಪಯೋಗವಾಗುತ್ತಿರುವುದಲ್ಲದೆ, ಸುತ್ತಮುತ್ತಲಿನ ನಿವಾಸಿಗಳಿಗೂ ತೊಂದರೆಯಾಗುತ್ತಿದೆ.
ಸರಕಾರಿ ಅನುದಾನದಲ್ಲಿ ನಿರ್ಮಿಸಲಾದ ಕಟ್ಟಡದ ನಿರ್ವಹಣೆ, ಸ್ವಚ್ಛತೆ ಮತ್ತು ಭದ್ರತೆಯನ್ನು ಕಾಪಾಡುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ, ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದರಿಂದ ಕಟ್ಟಡ ಈ ದುಸ್ಥಿತಿಗೆ ತಲುಪಿದೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಖಾಸಗಿ ಕಲ್ಯಾಣ ಮಂಟಪಗಳ ಬಾಡಿಗೆ ದುಬಾರಿಯಾಗಿರುವ ಇಂದಿನ ದಿನಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸರಕಾರಿ ಕಲ್ಯಾಣ ಮಂಟಪ ಆಸರೆಯಾಗಬೇಕಿತ್ತು. ಆದರೆ, ನಿರ್ವಹಣೆಯ ಕೊರತೆಯಿಂದಾಗಿ ಜನರಿಗೆ ಅದರ ಪ್ರಯೋಜನವೇ ಸಿಗದಂತಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಿದ ಕಟ್ಟಡ ಅನೈತಿಕ ಚಟುವಟಿಕೆಗಳಿಗೆ ಆಶ್ರಯ ತಾಣವಾಗಿರುವುದು ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಲ್ಯಾಣ ಮಂಟಪದ ಸ್ವಚ್ಛತೆ ಹಾಗೂ ದುರಸ್ತಿ ಕಾರ್ಯ ಕೈಗೊಂಡು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ರಾತ್ರಿ ವೇಳೆ ಅನಗತ್ಯ ಪ್ರವೇಶ ತಡೆಯಲು ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ಅಗತ್ಯವಿದ್ದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ನಿಯಮಿತ ಮೇಲ್ವಿಚಾರಣೆ ನಡೆಸಬೇಕು. ಸಾರ್ವಜನಿಕ ಆಸ್ತಿಯನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ಕಾರ್ಯಕ್ರಮಗಳನ್ನು ಕಡಿಮೆ ವೆಚ್ಚದಲ್ಲಿ ನಡೆಸಲು ಅನುಕೂಲವಾಗಿದ್ದ ಸರಕಾರಿ ಕಲ್ಯಾಣ ಮಂಟಪ ಈಗ ಹಾಳಾಗಿದೆ. ಖಾಸಗಿ ಕಲ್ಯಾಣ ಮಂಟಪಗಳ ಬಾಡಿಗೆ ದುಬಾರಿಯಾಗಿದ್ದು, ಅಷ್ಟು ಹಣ ಪಾವತಿಸುವುದು ಎಲ್ಲರಿಗೂ ಸಾಧ್ಯವಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕಲ್ಯಾಣ ಮಂಟಪವನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗೆ ಒದಗಿಸಬೇಕು.
-ದಿಲೀಪ್ ಶೆರಿಕಾರ್, ಸಾಮಾಜಿಕ ಕಾರ್ಯಕರ್ತ, ಭಾಲ್ಕಿ
ಸರಕಾರಿ ಕಲ್ಯಾಣ ಮಂಟಪದ ದುರಸ್ತಿಗೆ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು.
-ಮಲ್ಲಿಕಾರ್ಜುನ್ ವಡ್ಡನಕೆರೆ, ತಹಶೀಲ್ದಾರ್, ಭಾಲ್ಕಿ






