ಶಿವಮೊಗ್ಗ ಜಿಲ್ಲೆಯ 32 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಪ್ರಸ್ತಾವ

ಶಿವಮೊಗ್ಗ: ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ವಿವಿಧ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಇಂಗ್ಲಿಷ್ ಮಾಧ್ಯಮದ ಮೊರೆ ಹೋಗಿದೆ. ಜಿಲ್ಲೆಯ 32 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಅನುಮತಿ ಕೋರಿ ಶಿಕ್ಷಣ ಇಲಾಖೆ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ಕೊರೋನ ಬಳಿಕ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದರೂ ಸರಕಾರಿ ಶಾಲೆಗಳ ಬಗ್ಗೆ ತಾತ್ಸಾರದಿಂದಲೋ ಅಥವಾ ಇಂಗ್ಲೀಷ್ ಮೇಲಿನ ವ್ಯಾಮೋಹದಿಂದಲೋ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಲು ಒಲ್ಲೆ ಎನ್ನುತ್ತಿದ್ದಾರೆ. ಪರಿಣಾಮ ಜಿಲ್ಲೆಯಲ್ಲಿ ಬಹಳಷ್ಟು ಶಾಲೆಗಳಲ್ಲಿ ದಾಖಲಾಗಿರುವ ಮಕ್ಕಳ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಇದು ಭವಿಷ್ಯದಲ್ಲಿ ಸರಕಾರಿ ಶಾಲೆಗಳ ಬಾಗಿಲು ಮುಚ್ಚುವ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.
ಜಿಲ್ಲೆಯಲ್ಲಿ 2,000ಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿವೆ. ಈ ಪೈಕಿ 1ರಿಂದ 7ನೇ ತರಗತಿವರೆಗೆ ಒಟ್ಟು 212 ಸರಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ಮಕ್ಕಳಿದ್ದಾರೆ. ಅದರಲ್ಲೂ 52 ಸರಕಾರಿ ಶಾಲೆಗಳಲ್ಲಿ 5ಕ್ಕಿಂತ ಕಡಿಮೆ ಮಕ್ಕಳು ದಾಖಲಾಗಿದ್ದಾರೆ. ಈ ಪೈಕಿ ಭದ್ರಾವತಿ ತಾಲೂಕಿನ ಬಾರಂದೂರಿನ ಸರಕಾರಿ ಪ್ರಾಥಮಿಕ ಶಾಲೆ, ಸೊರಬ ತಾಲೂಕಿನ ಗುಡವಿ ಸರಕಾರಿ ಪ್ರಾಥಮಿಕ ಶಾಲೆ, ತೀರ್ಥಹಳ್ಳಿ ತಾಲೂಕಿನ ದೇವಂಗಿಯ ಸರಕಾರಿ ಪ್ರಾಥಮಿಕ ಶಾಲೆ, ಮೇಗರವಳ್ಳಿ ಸರಕಾರಿ ಪ್ರಾಥಮಿಕ ಶಾಲೆ, ನಲ್ಲೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇವಲ ಒಬ್ಬ ವಿದ್ಯಾರ್ಥಿ ಇದ್ದಾರೆ. ಹೀಗೆ ಸಾಕಷ್ಟು ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಬೆರಳೆಣಿಕೆಯಷ್ಟಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ಜಿಲ್ಲೆಯಲ್ಲಿ ಸಾಕಷ್ಟು ಸರಕಾರಿ ಶಾಲೆಗಳಿಗೆ ಬೀಗ ಹಾಕುವ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಹೀಗಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಳಕ್ಕೆ ವಿವಿಧ ಪ್ರಯತ್ನ ಮಾಡುತ್ತಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆ ಈಗ ಸರಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳು ಬರಬೇಕು ಎಂದರೆ ಇಂಗ್ಲೀಷ್ ಮಾಧ್ಯಮ ಪ್ರಾರಂಭ ಮಾಡಬೇಕು ಎಂಬ ದಾರಿ ಕಂಡುಕೊಂಡಿದೆ. ಹೀಗಾಗಿ ಈ ಬಾರಿ 32 ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಲು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.
ಸರಕಾರಿ ನಿಯಮದ ಪ್ರಕಾರ ಸರಕಾರಿ ಶಾಲೆಯಲ್ಲಿ ಒಬ್ಬ ವಿದ್ಯಾರ್ಥಿ ಇದ್ದರೂ ಅಲ್ಲಿ ಶಾಲೆ ನಡೆಸಬೇಕಿದೆ. ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ, ಬಿಸಿಯೂಟ ಸೇರಿದಂತೆ ಇನ್ನೂ ಅನೇಕ ಸೌಲಭ್ಯಗಳನ್ನು ಸರಕಾರದಿಂದ ಉಚಿತವಾಗಿ ನೀಡಲಾಗುತ್ತಿದೆ. ಆದರೆ, ಇಂಗ್ಲೀಷ್ ಮಾಧ್ಯಮ ಇಲ್ಲದ ಕಾರಣ ಬಹುತೇಕ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹೀಗಾಗಿ ಇನ್ನು ಸರಕಾರಿ ಶಾಲೆಯಲ್ಲೂ ಆಂಗ್ಲ ಮಾಧ್ಯಮ ಆರಂಭಿಸಿದರೆ ಮಕ್ಕಳ ಸಂಖ್ಯೆ ಹೆಚ್ಚಿಸಬಹುದು ಎಂಬುದು ಶಿಕ್ಷಣ ಇಲಾಖೆಯ ಅಧಿಕಾರಿಗಳ ಲೆಕ್ಕಚಾರ. ಹೀಗಾಗಿ ಕಳೆದ ವರ್ಷ ಜಿಲ್ಲೆಯಲ್ಲಿ 49 ಸರಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಕ್ಕೆ ರಾಜ್ಯ ಸರಕಾರ ಅನುಮತಿ ನೀಡಿತ್ತು. ಈ ಬಾರಿ ಇನ್ನೂ 32 ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಅನುಮತಿ ಕೋರಿ ಪ್ರಸ್ತಾವ ಸಲ್ಲಿಸಿದೆ.







