ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗೆ ನಿರಾಕರಣೆ

ಸಾಂದರ್ಭಿಕ ಚಿತ್ರ PC: freepik
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿಗಾಗಿ ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದರೂ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ’ಕೈ’ ಎತ್ತಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಸಿಗದೇ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ಹೀಗಾಗಿ ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಬೇಕು ಎಂಬ ಬೇಡಿಕೆ ಪ್ರಸ್ತಾವಗಳು ಇಲಾಖೆಗೆ ಸಲ್ಲಿಕೆಯಾಗುತ್ತಲೇ ಇವೆ. ಆದರೆ ಅನುದಾನ ಕೊರತೆಯಿರುವ ಕಾರಣ ಈ ಯಾವ ಪ್ರಸ್ತಾವಗಳನ್ನು ಇಲಾಖೆಯು ಒಪ್ಪುತ್ತಿಲ್ಲ.
ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನ ಮಹಾಂತಪೂರ ಗ್ರಾಮದಲ್ಲಿ ಹೊಸ ವಿದ್ಯಾರ್ಥಿ ನಿಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಒಪ್ಪಿಲ್ಲ. ಈ ಸಂಬಂಧ 2025ರ ಜುಲೈ 2ರಂದು ಇಲಾಖೆಯ ಸರಕಾರದ ಕಾರ್ಯದರ್ಶಿ, ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿಯೇ ’ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ಈ ಪತ್ರದ ಪ್ರತಿಯು ‘ದಿ ಫೈಲ್’ಗೆ ಲಭ್ಯವಾಗಿದೆ.
ಪತ್ರದಲ್ಲೇನಿದೆ?: ಕಲಬುರಗಿ ಜಿಲ್ಲೆಯ ಅಫಜಲಫೂರ ತಾಲೂಕಿನ ಮಹಾಂತಪೂರ ಗ್ರಾಮದಲ್ಲಿ 100 ಸಂಖ್ಯಾಬಲದ 01 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಮಂಜೂರು ಮಾಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಸರಕಾರಕ್ಕೆ 2025ರ ಜನವರಿ 28ರಂದು ಪ್ರಸ್ತಾವ (BCWD-12037/78/2024-BCWD_HOSTEL_BCWD 28.01.2025) ಸಲ್ಲಿಸಿದ್ದರು ಎಂಬುದು ಪತ್ರದಿಂದ ಗೊತ್ತಾಗಿದೆ.
ಈ ಪ್ರಸ್ತಾವವನ್ನು ಇಲಾಖೆಯು ಪರಿಶೀಲಿಸಿತ್ತು. ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ 62 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು ಘೋಷಣೆ ಮಾಡಲಾಗಿದೆ. ಇದರ ಅನ್ವಯ ಕಲಬುರಗಿ ಜಿಲ್ಲೆಗೆ 2 ವಿದ್ಯಾರ್ಥಿ ನಿಲಯಗಳೂ ಲಭ್ಯವಾಗುತ್ತವೆ. ಇದನ್ನು ಹೊರತುಪಡಿಸಿ ಹೊಸ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಿ ಹೆಚ್ಚುವರಿ ಅನುದಾನ ಒದಗಿಸಲು ಸಾಧ್ಯವಿರುವುದಿಲ್ಲ.
ಈ ಹಿನ್ನೆಲೆಯಲ್ಲಿ ಆಯವ್ಯಯ ಘೋಷಣೆಯಂತೆ ಲಭ್ಯವಾಗುವ 2 ವಿದ್ಯಾರ್ಥಿ ನಿಲಯಗಳನ್ನು ಆದ್ಯತೆ ಮೇಲೆ ಮಂಜೂರು ಮಾಡುವ ಬಗ್ಗೆ ಕ್ರಮ ವಹಿಸಲಾಗುತ್ತದೆ. ಹಾಗೂ ಈ ಪ್ರಸ್ತಾವನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಇಲಾಖೆಯ ಸರಕಾರದ ಕಾರ್ಯದರ್ಶಿಯು ಆಯುಕ್ತರಿಗೆ ತಿಳಿಸಿರುವುದು ಪತ್ರದಿಂದ ತಿಳಿದು ಬಂದಿದೆ.







