ಚರಂಡಿ ನೀರು ನಿಂತು ದುರ್ವಾಸನೆ : ಸುಗಮ ಹರಿವಿಗೆ ನಿಡಗುಂದಿ ಜನರ ಆಗ್ರಹ

ನಿಡಗುಂದಿ: ಪಟ್ಟಣದ ವಾರ್ಡ್ ನಂ. 14ರಲ್ಲಿರುವ ನ್ಯೂ ಇಂಗ್ಲಿಷ್ ಹೈಸ್ಕೂಲ್ ಎದುರು ಭಾಗದಲ್ಲಿ ಚರಂಡಿ ನೀರು ನಿಂತು ಗಬ್ಬು ವಾಸನೆ ಹರಡುತ್ತಿರುವುದರಿಂದ ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ.
ಚರಂಡಿ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ನೀರು ಒಂದೇ ಸ್ಥಳದಲ್ಲಿ ಸಂಗ್ರಹವಾಗುತ್ತಿದ್ದು, ದುರ್ವಾಸನೆ ಹೆಚ್ಚಾಗುತ್ತಿದೆ. ಇದರ ಪಕ್ಕದಲ್ಲೇ ಶಾಲೆಯ ಕ್ರೀಡಾಂಗಣ ಇರುವುದರಿಂದ ವಿದ್ಯಾರ್ಥಿಗಳು ಆಟವಾಡಲು ಹಾಗೂ ಶಾಲಾ ಚಟುವಟಿಕೆಗಳಲ್ಲಿ ಭಾಗವಹಿಸಲು ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮಳೆ ಬಂದಾಗ ಚರಂಡಿ ನೀರು ಶಾಲಾ ಮೈದಾನಕ್ಕೆ ನುಗ್ಗಿ ಮೈದಾನವೇ ಜಲಾವೃತವಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಶಾಲೆಗೆ ಬರುವುದು ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಕಷ್ಟವಾಗಿದೆ. ಜೊತೆಗೆ ನಿಂತ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚಾಗಿ, ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ಪಾಲಕರು ಹಾಗೂ ಶಿಕ್ಷಕರು ಕಳವಳ ವ್ಯಕ್ತಪಡಿಸಿದ್ದಾರೆ.
ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚರಂಡಿ ನೀರು ಸುಗಮವಾಗಿ ಹರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಚರಂಡಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ.
ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಚರಂಡಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಅನುದಾನದ ಕೊರತೆಯಿಂದ ಕಾಮಗಾರಿ ವಿಳಂಬವಾಗಿದೆ. ಮುಂದಿನ ದಿನಗಳಲ್ಲಿ ಟೆಂಡರ್ ಕರೆದು 16ನೇ ಹಣಕಾಸು ಯೋಜನೆಯಡಿ ಚರಂಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು.
-ಶರಣಮ್ಮ ಜಿ ವಾರದ, ಪಟ್ಟಣ ಪಂಚಾಯತ್ ಸದಸ್ಯರು ನಿಡಗುಂದಿ
16ನೆಯ ಹಣಕಾಸು ಆಯೋಗದಿಂದ ವಾರ್ಡ್ ನಂಬರ್ 14ರ ಚರಂಡಿ ಕೆಲಸವನ್ನು ಶೀಘ್ರವಾಗಿ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನೋಡಿಕೊಳ್ಳುತ್ತೇವೆ.
-ಪ್ರತಾಪ್ ಕೊಡುಗೆ, ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ






