ರಾಯಚೂರಿನಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ರಾಯಚೂರು: ನಗರದ ಅರಬ್ ಮೊಹಲ್ಲಾ ಸಮೀಪದ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಟಿಪ್ಪು ಸುಲ್ತಾನ್ ಸಮಿತಿಯ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗಣ್ಯರು ಟಿಪ್ಪು ಸುಲ್ತಾನ್ ಅವರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಶಾಂತಪ್ಪ ಮಾತನಾಡಿ, ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಅಪ್ಪಟ ದೇಶಪ್ರೇಮಿಯಾಗಿದ್ದರು. ಆಡಳಿತದಲ್ಲಿ ಹಲವು ಸುಧಾರಣೆಗಳನ್ನು ಜಾರಿಗೆ ತರುವ ಮೂಲಕ ಮಾದರಿಯಾಗಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಲ್ಲದೆ, ತಮ್ಮ ಮಕ್ಕಳನ್ನೂ ಒತ್ತೆಯಾಳುಗಳಾಗಿ ನೀಡಿದ್ದರು. ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಅಪಪ್ರಚಾರ ನಡೆಸುತ್ತಿದ್ದಾರೆ. ಏನೇ ಮಾಡಿದರೂ ಅವರ ಸಾಧನೆಗಳನ್ನು ಮರೆಮಾಚಲು ಸಾಧ್ಯವಿಲ್ಲ. ಅವರು ಕೇವಲ ಮೈಸೂರಿನ ಹುಲಿಯಲ್ಲ, ನಾಡಿನ ಹುಲಿ. ಟಿಪ್ಪು ಸುಲ್ತಾನ್ ಅವರನ್ನು ಒಂದು ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಟಿಪ್ಪು ಸುಲ್ತಾನ್ ಅವರ ನಾಮಫಲಕಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.




