ಸಿಎಂ ಬದಲಾವಣೆ ಹೈಕಮಾಂಡ್ ತೀರ್ಮಾನ: ಡಿ.ಕೆ. ಶಿವಕುಮಾರ್

ಲಿಂಗಸೂಗೂರು, ಮೇ 10: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಹೈಕಮಾಂಡ್ ಮಟ್ಟದ ತೀರ್ಮಾನವಾಗಿದ್ದು, ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ತಾನು ಬದ್ಧನಾಗಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಾಲೂಕಿನ ಮುದಗಲ್ ಪಟ್ಟಣದಲ್ಲಿ ರವಿವಾರ ಮಾಜಿ ಶಾಸಕ ಡಿ.ಎಸ್. ಹುಲಗೇರಿ ಅವರ ಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಅದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಹೈಕಮಾಂಡ್‌ನ ತೀರ್ಮಾನಕ್ಕೆ ನಾನು ಬದ್ಧ” ಎಂದು ಹೇಳಿದರು.
ಇದೇ ವೇಳೆ ಮುದಗಲ್ ಪಟ್ಟಣದಲ್ಲಿ ಉಲ್ಬಣಗೊಂಡಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಪತ್ರಕರ್ತರು ಪ್ರಶ್ನಿಸಿದಾಗ, “ಪಟ್ಟಣದಲ್ಲಿ ಇಂತಹ ಗಂಭೀರ ನೀರಿನ ಸಮಸ್ಯೆ ಇದೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ” ಎಂದು ಉತ್ತರಿಸಿದರು.
ಆದರೆ, ಮುದಗಲ್‌ನಲ್ಲಿ ಕುಡಿಯುವ ನೀರಿನ ಸಮಸ್ಯೆ ಕಳೆದ ಹಲವು ತಿಂಗಳಿಂದ ತೀವ್ರ ಸ್ವರೂಪ ಪಡೆದಿದ್ದು, ಈ ಕುರಿತು ವಿಧಾನಸಭೆಯ ಅಧಿವೇಶನದಲ್ಲಿಯೂ ಚರ್ಚೆ ನಡೆದಿತ್ತು. ಇಂತಹ ಪರಿಸ್ಥಿತಿಯಲ್ಲಿಯೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇಲ್ಲ ಎಂಬ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಅಚ್ಚರಿ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ.
ಸ್ಥಳೀಯ ನಿವಾಸಿಗಳು ಹಾಗೂ ಹೋರಾಟಗಾರರು, “ಪಟ್ಟಣದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿರುವಾಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವರು, ಶಾಸಕರು, ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.






