ಎಸ್‌ಐಆರ್‌ಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಪೂವಿತಾ ಎಸ್.

ರಾಯಚೂರು, ಜು.10: ಮತದಾರರ ಪಟ್ಟಿಯ ನಿಖರತೆ ಹಾಗೂ ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಕಾರಾತ್ಮಕವಾಗಿ ಸಹಕರಿಸಿ ನಿಖರ ಮಾಹಿತಿ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು.
ನಗರದ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಎಸ್‌ಐಆರ್‌ಗೆ ಸಂಬಂಧಿಸಿದ ಗಣತಿ ನಮೂನೆಗಳ ವಿತರಣೆ ಕಾರ್ಯ ಪ್ರಗತಿಯಲ್ಲಿದ್ದು, ಜುಲೈ 10ರ ಮಧ್ಯಾಹ್ನ 12 ಗಂಟೆಯ ವೇಳೆಗೆ ಶೇ.98.45ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದ ಶೇ.1.55ರಷ್ಟು ಪ್ರಕರಣಗಳಲ್ಲಿ ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಮನೆಗೆ ಬೀಗ ಹಾಕಿ ಬೇರೆಡೆ ವಾಸಿಸುತ್ತಿರುವವರ ವಿವರಗಳಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಒಟ್ಟು 17,14,559 ಮತದಾರರ ಪೈಕಿ ಈಗಾಗಲೇ 16,88,008 ಮತದಾರರ (ಶೇ.98.45) ಮ್ಯಾಪಿಂಗ್ ಪೂರ್ಣಗೊಂಡಿದೆ. ಉಳಿದ ಮತದಾರರ ವಿಳಾಸ ಪತ್ತೆಯಾಗದಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ನೇಮಿಸಿರುವ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ) ನಿಖರ ಮಾಹಿತಿ ನೀಡುವ ಮೂಲಕ ಸಹಕರಿಸಬೇಕು. ಮೃತಪಟ್ಟವರ ಮರಣ ಪ್ರಮಾಣ ಪತ್ರ ಲಭ್ಯವಿದ್ದರೆ ಅವರ ಹೆಸರನ್ನು ಪಟ್ಟಿಯಿಂದ ತೆಗೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರನ್ನು ಗುರುತಿಸುವಲ್ಲಿ ಸ್ಥಳೀಯ ವಾರ್ಡ್ ಸದಸ್ಯರು, ಮಾಜಿ ಕೌನ್ಸಿಲರ್‌ಗಳು ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ತಹಶೀಲ್ದಾರರು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಭೆಗಳನ್ನು ನಡೆಸಿ ಮಹಜರು ಪ್ರಕ್ರಿಯೆ ಮೂಲಕ ನಿಖರ ಮಾಹಿತಿ ಸಂಗ್ರಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪಾರದರ್ಶಕವಾಗಿ ನಡೆಯುತ್ತಿದ್ದು, ಗಣತಿ ನಮೂನೆಗಳ ವಿತರಣೆಯಲ್ಲಿ ರಾಯಚೂರು ಜಿಲ್ಲೆ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡಿದೆ. ಯಾವುದೇ ಗೊಂದಲ ಅಥವಾ ವಿವಾದಕ್ಕೆ ಆಸ್ಪದ ನೀಡದಂತೆ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.
ಗಣತಿ ನಮೂನೆಗಳನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಉಂಟಾಗುವ ಗೊಂದಲ ನಿವಾರಣೆಗೆ ಜಾಗೃತಿ ಮೂಡಿಸಲಾಗುತ್ತಿದೆ. ನಮೂನೆಗಳ ಮೊದಲ ಹಾಗೂ ಎರಡನೇ ಭಾಗಗಳನ್ನು ಸರಿಯಾಗಿ ಭರ್ತಿ ಮಾಡುವ ಕುರಿತು ಬಿಎಲ್‌ಒ ಹಾಗೂ ಬಿಎಲ್‌ಎಗಳಿಗೆ ವಿಶೇಷ ತರಬೇತಿ ನೀಡಲಾಗಿದ್ದು, ಎಸ್‌ಐಆರ್ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹೊಪಾತ್ರ, ಅಪರ ಜಿಲ್ಲಾಧಿಕಾರಿ ಶಿವಾನಂದ, ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್, ಲಿಂಗಸುಗೂರು ಸಹಾಯಕ ಆಯುಕ್ತ ಬಸವಣ್ಣೆಪ್ಪ ಕಲಶೆಟ್ಟಿ, ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆಯ ಶಿರಸ್ತೇದಾರ ಋಷಿಕೇಶಿ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರರು, ಚುನಾವಣೆ ಶಾಖೆಯ ಶಿರಸ್ತೇದಾರರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಭೆಯಲ್ಲಿ ಇದ್ದರು.






