Devadurga | ಟೆಲಿಫೋನ್ ಟವರ್ ಏರಿ ಆತ್ಮಹತ್ಯೆಗೆ ಯತ್ನ: ಎರಡು ಗಂಟೆಯಾದರೂ ಕೆಳಗಿಳಿಯದ ಯುವಕ

ದೇವದುರ್ಗ: ಪಟ್ಟಣದ ಶಹಾಪುರ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಶಾಲೆಯ ಪಕ್ಕದ ಟೆಲಿಫೋನ್ ಟವರ್ ಏರಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಯುವಕ ಟವರ್ ಏರಿ ಸುಮಾರು ಎರಡು ಗಂಟೆಗಳಾದರೂ ಕೆಳಗಿಳಿಯದೆ ಹೈಡ್ರಾಮ ನಡೆಸುತ್ತಿದ್ದಾನೆ. ಮದ್ಯಪಾನ ಮಾಡಿದ್ದಾನೆ ಎನ್ನಲಾಗುತ್ತಿದ್ದು, ಕೆಳಗೆ ಹಾರುವುದಾಗಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ಎರಡು ಗಂಟೆಗಳಿಂದ ಹರಸಾಹಸ ಪಡುತ್ತಿದ್ದಾರೆ. ಆದರೆ, ಯುವಕ ಕೆಳಗಿಳಿಯದೆ ಬೆದರಿಕೆ ಹಾಕುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟವರ್ ಏರಿದ ಬಳಿಕ ಯುವಕ ಬಿಳಿ ಹಾಳೆಯೊಂದರಲ್ಲಿ ಕೆಲವರ ಹೆಸರು ಹಾಗೂ ಮೊಬೈಲ್ ಸಂಖ್ಯೆಯನ್ನು ಬರೆದು ಕೆಳಗೆ ಎಸೆದಿದ್ದಾನೆ ಎನ್ನಲಾಗಿದೆ. ಸದ್ಯ ಟವರ್ ಏರಿರುವ ಯುವಕ ಯಾರು ಎಂಬುದು ಇನ್ನೂ ಖಚಿತವಾಗಿಲ್ಲ. ಯುವಕನನ್ನು ಸುರಕ್ಷಿತವಾಗಿ ಕೆಳಗಿಳಿಸಲು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.






