ಪಡಿತರ ಅಕ್ಕಿಯ ಬದಲು ಪೌಷ್ಟಿಕ ಆಹಾರ ಧಾನ್ಯಗಳ ಕಿಟ್ ವಿತರಣೆ ಶೀಘ್ರ ಆರಂಭ : ಸಚಿವ ರಿಝ್ವಾನ್ ಅರ್ಷದ್
ಪಡಿತರ ಅಕ್ಕಿ ಕಾಳಸಂತೆ ವಿರುದ್ಧ ಕಾರ್ಯಾಚರಣೆ; 5,000 ಟನ್ ಅಕ್ಕಿ ವಶ, 285 ಮಂದಿ ಬಂಧನ

ರಾಯಚೂರು: ಜಿಲ್ಲೆಯ ಆಹಾರ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಕಾರ್ಯವೈಖರಿ ಮತ್ತು ಪ್ರಗತಿಯನ್ನು ಪರಿಶೀಲಿಸಲು ರಾಯಚೂರು ಜಿಲ್ಲೆಗೆ ಭೇಟಿ ನೀಡಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ಅಕ್ರಮ ಸಾಗಾಟದ ವಿರುದ್ಧ ಕಠಿಣ ಕಾರ್ಯಾಚರಣೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಚಿವ ರಿಝ್ವಾನ್ ಅರ್ಷದ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನ.28ರಂದು ಶನಿವಾರ ಆಯೋಜಿಸಿದ್ದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ರಾಯಚೂರು ಜಿಲ್ಲೆಯಲ್ಲಿ ಈವರೆಗೆ ಶೇ.80ರಷ್ಟು ಆಹಾರ ಧಾನ್ಯ ಹಾಗೂ ಪಡಿತರ ವಿತರಣೆ ಪೂರ್ಣಗೊಂಡಿದೆ. ಇತ್ತೀಚೆಗೆ ತಾಂತ್ರಿಕ ತೊಡಕು ಹಾಗೂ ಆಧಾರ್ ಸಂಸ್ಥೆಯು ಭದ್ರತಾ ಕಾರಣಗಳಿಗಾಗಿ ವ್ಯವಸ್ಥೆಯನ್ನು ನವೀಕರಿಸಿದ ಹಿನ್ನೆಲೆಯಲ್ಲಿ ಸರ್ವರ್‌ನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಿತ್ತು. ಪ್ರಸ್ತುತ ಸಮಸ್ಯೆ ಬಗೆಹರಿದಿದ್ದು, ವ್ಯವಸ್ಥೆಯು ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಇ-ಕೆವೈಸಿ ಪ್ರಕ್ರಿಯೆ ಶೇ.83ರಷ್ಟು ಪೂರ್ಣ :
ಜಿಲ್ಲೆಯಲ್ಲಿ ಶೇ.83ರಷ್ಟು ಇ-ಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಉದ್ಯೋಗ ಹಾಗೂ ಇತರ ಕಾರಣಗಳಿಗಾಗಿ ಬೆಂಗಳೂರು, ಇತರೆ ನಗರಗಳು ಮತ್ತು ಹೊರರಾಜ್ಯಗಳಿಗೆ ವಲಸೆ ಹೋದ ಜನರು ಇ-ಕೆವೈಸಿ ಮಾಡಿಸಿಕೊಳ್ಳಲು ಕೆಲಸ ಬಿಟ್ಟು ಊರಿಗೆ ಬರುವುದನ್ನು ತಪ್ಪಿಸಲು ‘ಅನ್ನ ಸೇವೆ’ ಆ್ಯಪ್ ಮೂಲಕ ಮನೆಯಿಂದಲೇ ಪ್ರಕ್ರಿಯೆ ಪೂರ್ಣಗೊಳಿಸುವ ಸೌಲಭ್ಯ ಕಲ್ಪಿಸಲಾಗಿದೆ. ಈ ಸೌಲಭ್ಯದ ಪ್ರಯೋಜನವನ್ನು ಲಕ್ಷಾಂತರ ಮಂದಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.
ಬಡವರಿಗೆ ಸೇರಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಗೆ ಸಾಗಾಟ ಮಾಡುವ ದಂಧೆಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ 5,000 ಟನ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, 415 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 285 ಮಂದಿಯನ್ನು ಬಂಧಿಸಲಾಗಿದೆ. ಯಾವುದೇ ಕಾರಣಕ್ಕೂ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ. ಗಡಿಭಾಗದಲ್ಲಿ ಪಡಿತರ ಅಕ್ಕಿ ವ್ಯಾಪಾರದಲ್ಲಿ ತೊಡಗಿರುವವರು ತಕ್ಷಣವೇ ಆ ದಂಧೆಯನ್ನು ಕೈಬಿಡಬೇಕು. ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಈ ಬೃಹತ್ ಕಾರ್ಯಾಚರಣೆಯನ್ನು ಮುಂದೆಯೂ ನಿರಂತರವಾಗಿ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ಅಕ್ಕಿಯ ಬದಲು ಪೌಷ್ಟಿಕ ಆಹಾರ ಕಿಟ್ ವಿತರಣೆ :
ರಾಯಚೂರು ಸೇರಿದಂತೆ ಅಕ್ಕಿ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಇರುವುದರಿಂದ, ಫಲಾನುಭವಿಗಳ ಆರೋಗ್ಯ ಮತ್ತು ಪೌಷ್ಟಿಕತೆಯನ್ನು ಗಮನದಲ್ಲಿಟ್ಟುಕೊಂಡು ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳ ಕಿಟ್ ನೀಡುವ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದರು.
ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವುದು ಹಾಗೂ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಳೆದ ಎರಡು ತಿಂಗಳಲ್ಲಿ ಪೆಟ್ರೋಲ್ ಬಂಕ್‌ಗಳು ಮತ್ತು ಗ್ಯಾಸ್ ಏಜೆನ್ಸಿಗಳ ಮೇಲೆ ತಪಾಸಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅವ್ಯವಹಾರಗಳನ್ನು ತಡೆಯಲು ಇಲಾಖೆಯು ಇನ್ನಷ್ಟು ಬಿಗಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
ಕಾನೂನು ಮಾಪನ ಶಾಸ್ತ್ರ ಇಲಾಖೆ ಚುರುಕುಗೊಳಿಸಲು ಕ್ರಮ :
ಗ್ರಾಹಕರಿಗೆ ಸರಿಯಾದ ತೂಕ ಹಾಗೂ ಗುಣಮಟ್ಟದ ಸರಕುಗಳು ದೊರೆಯುವಂತೆ ನೋಡಿಕೊಳ್ಳುವುದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ. ಇಲಾಖೆಯ ಕಾರ್ಯನಿರ್ವಹಣೆಯಲ್ಲಿನ ಲೋಪದೋಷಗಳ ಕುರಿತು ಗಮನಹರಿಸಿ, ಇಲಾಖೆಯನ್ನು ಇನ್ನಷ್ಟು ಚುರುಕುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್.ಭೋಸುರಾಜು, ಮಾನ್ವಿ ಕ್ಷೇತ್ರದ ಶಾಸಕ ಜಿ. ಹಂಪಯ್ಯ ನಾಯಕ, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಸಹಾಯಕ ಆಯುಕ್ತ ಡಾ. ಹಂಪಣ್ಣ ಸಜ್ಜನ್, ರಾಯಚೂರು ತಹಶೀಲ್ದಾರ್ ಸುರೇಶ್ ವರ್ಮಾ, ಆಹಾರ ಇಲಾಖೆಯ ಜಿಲ್ಲಾ ವ್ಯವಸ್ಥಾಪಕ ಹರೀಶ್ ಸೇರಿದಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.






