ಸಚಿವ ಸ್ಥಾನ ಸಿಕ್ಕರೆ ಸಂತೋಷ, ಆದರೆ ಯಾವುದೇ ಲಾಬಿ ಮಾಡುವುದಿಲ್ಲ : ಎನ್.ಎಸ್.ಬೋಸರಾಜು

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಮೂರು ವರ್ಷಗಳ ಕಾಲ ಸಚಿವರಾಗಿ ಕಾರ್ಯನಿರ್ವಹಿಸಿರುವುದು ತೃಪ್ತಿ ತಂದಿದ್ದು, ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಕ್ಕರೆ ಸಚಿವನಾಗಲು ಆಸೆಯಿದೆ. ಆದರೆ ಯಾವುದೇ ರೀತಿಯ ಲಾಬಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.
ನಗರದ ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನ ನೀಡುವುದು ಅಥವಾ ನೀಡದಿರುವುದು ಪಕ್ಷದ ಹೈಕಮಾಂಡ್ ನಿರ್ಧಾರವಾಗಿದ್ದು, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿಂದೆ ಸಚಿವರಾಗಿದ್ದಾಗಲೂ ಯಾವುದೇ ಲಾಬಿ ಮಾಡಿರಲಿಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಡಿ. ಕೆ. ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿರುವುದು ಪಕ್ಷದ ಸೈದ್ಧಾಂತಿಕ ಬದ್ಧತೆಯ ಭಾಗವಾಗಿದೆ. ಸರ್ಕಾರ ಅಸ್ಥಿರವಾಗಲಿದೆ ಎಂಬ ಬಿಜೆಪಿಯ ನಿರೀಕ್ಷೆ ಈಡೇರಿಲ್ಲ ಎಂದು ಹೇಳಿದರು.
ತಮ್ಮ ಸಚಿವ ಅವಧಿಯಲ್ಲಿ ಜಿಲ್ಲೆಗೆ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ತಂದಿರುವುದಾಗಿ ಹೇಳಿದ ಬೋಸರಾಜು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸಿದೆ ಎಂದು ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಸರ್ಕಾರದ ಸಾಧನೆಯೇ ಉತ್ತರ ನೀಡಿದೆ ಎಂದರು.
ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ನೀಡಬೇಕಿದ್ದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಅವರು, ಬರ ಪರಿಹಾರಕ್ಕಾಗಿ ನ್ಯಾಯಾಲಯದ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಎಂದು ಹೇಳಿದರು.
ಆಲಮಟ್ಟಿ ಹಾಗೂ ತುಂಗಭದ್ರಾ ಯೋಜನೆಗಳ ಕಾಮಗಾರಿಗಳಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಮಂಚಾಲ ಮತ್ತು ಚಿಕಲಪರ್ವಿ ಡ್ಯಾಂ ಯೋಜನೆಗಳ ಪೂರ್ಣಗೊಳಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸರ್ಕಾರಗಳೊಂದಿಗೆ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣ, ವಿಮಾನ ನಿಲ್ದಾಣ ಪುನಶ್ಚೇತನ, ಮಹಾನಗರ ಪಾಲಿಕೆ ಅಭಿವೃದ್ಧಿ, ಒಪೆಕ್ ಆಸ್ಪತ್ರೆ ನವೀಕರಣ, ಕನ್ವೆನ್ಷನ್ ಹಾಲ್, ಹೊಸ ಜೈಲು ಕಟ್ಟಡ ಹಾಗೂ ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಯೋಜನೆಗಳನ್ನು ತಮ್ಮ ಅವಧಿಯಲ್ಲಿ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಜಿ.ಕುಮಾರ ನಾಯಕ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.






