ಲಿಂಗಸುಗೂರಿನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ–ಶಾಸಕರ ಸಹೋದರ ನಡುವೆ ವಾಗ್ವಾದ : ವಿಡಿಯೋ ವೈರಲ್

ಲಿಂಗಸುಗೂರು : ರಾಯಚೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ ಹಾಗೂ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ಕರಿಯಪ್ಪ ವಜ್ಜಲ್ ನಡುವೆ ಸೋಮವಾರ ಹಣದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದಿದೆ.
ಆರಂಭದಲ್ಲಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಳಿಕ ಅದು ತೀವ್ರಗೊಂಡಿತು ಎಂದು ತಿಳಿದು ಬಂದಿದೆ. ಈ ವೇಳೆ ಎರಡೂ ಕಡೆಯ ಬೆಂಬಲಿಗರು ಸ್ಥಳಕ್ಕೆ ಆಗಮಿಸಿದ್ದರಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎರಡೂ ಗುಂಪಿನ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಹೊಡೆದಾಟದ ಹಂತಕ್ಕೂ ತಲುಪಿದೆ ಎನ್ನಲಾಗಿದೆ.
ಪರಸ್ಪರ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದರಿಂದ ಗೊಂದಲ ಮತ್ತಷ್ಟು ಹೆಚ್ಚಾದರೂ, ಸ್ಥಳದಲ್ಲಿದ್ದ ಮುಖಂಡರು ಹಾಗೂ ಕಾರ್ಯಕರ್ತರು ಮಧ್ಯಸ್ಥಿಕೆ ವಹಿಸಿ ಎರಡೂ ಗುಂಪುಗಳನ್ನು ಸಮಾಧಾನಪಡಿಸಿದ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿದುಬಂದಿದೆ.
ಈ ಘಟನೆ ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪಕ್ಷದ ಮುಖಂಡರ ನಡುವಿನ ಬಹಿರಂಗ ವಾಗ್ವಾದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಯಲಿಗೆಳೆದಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ಯಾವುದೇ ಅಧಿಕೃತ ದೂರು ದಾಖಲಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಆದರೆ, ಘಟನೆಯ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿವೆ.






