ಅಲ್ಪಸಂಖ್ಯಾತರ ಯೋಜನೆಯ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ: ನಿಸಾರ್ ಅಹ್ಮದ್

ರಾಯಚೂರು : ಅಲ್ಪಸಂಖ್ಯಾತರ ವರ್ಗಗಳ ಕಲ್ಯಾಣಕ್ಕಾಗಿ ರೂಪಿಸಲಾಗಿರುವ ಪ್ರಧಾನಮಂತ್ರಿಗಳ 15 ಅಂಶಗಳ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ನಿಗದಿತ ಅವಧಿಯೊಳಗೆ ಗುರಿ ಸಾಧಿಸಿಬೇಕೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ಯು.ನಿಸಾರ್ ಅಹ್ಮದ್ ಅವರು ಹೇಳಿದರು.
ಸೆ.12ರ ಶುಕ್ರವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶಿಕ್ಷಣ, ಕೌಶಲ್ಯ ಹಾಗೂ ಇತರೆ ಉದ್ಯೋಗಗಳಿಗೆ ತರಬೇತಿ ನೀಡಲು ಹೆಚ್ಚಿನ ಆದ್ಯತೆ ನೀಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಬಂದಂತಹ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ವಿಲೇವಾರಿ ಮಾಡಬೇಕು. ಕಾಲಕಾಲಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ವಿವಿಧ ಯೋಜನೆಯಡಿ ಅಲ್ಪಸಂಖ್ಯಾತರಿಗೆ ಸಾಲ ಸೌಲಭ್ಯ ಒದಗಿಸಬೇಕೆಂದರು.
ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಶೈಕ್ಷಣಿಕ ಅವಕಾಶ ಹೆಚ್ಚಳ, ಆರ್ಥಿಕ ಚಟುವಟಿಕೆ, ಜೀವನ ಮಟ್ಟ ಸುಧಾರಿಸಲು ವಿಶೇಷ ಕಾಳಜಿ ವಹಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಮೂಲಕ ಪೌಷ್ಠಿಕ ಆಹಾರ ಪೂರೈಕೆ, ಆರೋಗ್ಯ ಸೇವೆ, ಶಾಲಾ ಪೂರ್ವ ಅನೌಪಚಾರಿಕ ಶಿಕ್ಷಣ ಮತ್ತಿತರ ಸೇವೆಗಳನ್ನು ಅವಕಾಶ ವಂಚಿತ ಅಲ್ಪಸಂಖ್ಯಾತರ ಸಮುದಾಯಕ್ಕೆ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಕ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಬೈಸಿಕಲ್, ವಿದ್ಯಾರ್ಥಿ ವೇತನ ಮತ್ತಿತರ ಸೌಲಭ್ಯ, ಎಸೆಸೆಲ್ಸಿ, ಪಿಯುಸಿ, ಪದವಿಗಳಲ್ಲಿ ಹೆಚ್ಚು ಅಂಕಗಳಿಸಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸೇರಿದಂತೆ ಇತರೆ ಯೋಜನೆಯ ಕುರಿತು ಮಾಹಿತಿ ತಲುಪಿಸಬೇಕೆಂದರು.
ಅಲ್ಪಸಂಖ್ಯಾತರ ಶೈಕ್ಷಣಿಕ ಅವಕಾಶಗಳನ್ನು ಹೆಚ್ಚಿಸಬೇಕು. ಉರ್ದು ಶಿಕ್ಷಣಕ್ಕೆ ಹೆಚ್ಚಿನ ಸಂಪನ್ಮೂಲ ಒದಗಿಸುವುದು ಹಾಗೂ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸುವುದು ಮುಖ್ಯವಾಗಿದೆ. ತಂತ್ರಜ್ಞಾನ ತರಬೇತಿ ಮೂಲಕ ಕೌಶಲ್ಯ ಕಾರ್ಯಕ್ರಮಗಳನ್ನು ತಲುಪಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬೀನ್ ಮೊಹಪಾತ್ರ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬಲ್, ಡಿವೈಎಸ್ಪಿ ಶಾಂತಮೂರ್ತಿ, ನಿವೃತ್ತ ಎಎಸ್ಪಿ ಅಬ್ದುಲ್ ಖಾದರ್, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರವೀಣ್ ಕುಮಾರ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆ.ಡಿ.ಬಡಿಗೇರ, ಸಿಡಾಕ್ ಜಂಟಿ ನಿರ್ದೇಶಕರಾದ ಜಿ.ಯು.ಹುಡೇದ್, ಜಿಲ್ಲಾ ಉದ್ಯೋಗಾಧಿಕಾರಿ ನವೀನ್ ಕುಮಾರ್ ಸಂಗೇಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ ಕುಮಾರ್ ಸೇರಿದಂತೆ ಇತರರು ಇದ್ದರು.







