ರಾಯಚೂರು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಕನ್ನಡ ಸೇನೆ ಆಗ್ರಹ

ರಾಯಚೂರು: ರಾಯಚೂರು ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಹಾಗೂ ಜಾನುವಾರುಗಳ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿದ ಸಮಿತಿಯು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಮರ್ಪಕ ಮಳೆಯಾಗದ ಕಾರಣ ಜಿಲ್ಲೆಯಾದ್ಯಂತ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದೆ.
ರಾಯಚೂರು, ದೇವದುರ್ಗ, ಅರಕೇರ, ಸಿರವಾರ, ಮಾನವಿ, ಲಿಂಗಸುಗೂರು, ಮಸ್ಕಿ ಹಾಗೂ ಸಿಂಧನೂರು ತಾಲೂಕುಗಳಲ್ಲಿ ಹತ್ತಿ, ಮೆಣಸಿನಕಾಯಿ, ತೊಗರಿ, ಸೂರ್ಯಕಾಂತಿ ಹಾಗೂ ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಲಾಗಿದ್ದರೂ, ಮಳೆಯ ಕೊರತೆಯಿಂದ ಬೆಳೆಗಳು ಒಣಗಿ ಹೋಗಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದು ಸಮಿತಿಯು ಆತಂಕ ವ್ಯಕ್ತಪಡಿಸಿದೆ.
ಕೃಷಿ ಅವಲಂಬಿತ ಕುಟುಂಬಗಳು ಸಾಲದ ಸುಳಿಯಲ್ಲಿ ಸಿಲುಕಿರುವ ಹಿನ್ನೆಲೆಯಲ್ಲಿ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ರೈತರ ನೆರವಿಗೆ ಬರಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ರೈತರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಹಾಗೂ ಕೃಷಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ರೈತರ ಮಕ್ಕಳಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಗೋಶಾಲೆಗಳನ್ನು ತೆರೆಯಬೇಕು. ಜಾನುವಾರುಗಳ ಆಹಾರ ಮತ್ತು ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಮಿತಿ ಆಗ್ರಹಿಸಿದೆ.
ಜಿಲ್ಲೆಯ ಆರ್ಥಿಕ ಬೆನ್ನೆಲುಬಾಗಿರುವ ರೈತರು ಮತ್ತು ಜಾನುವಾರುಗಳನ್ನು ಬರಗಾಲದ ಸಂಕಷ್ಟದಿಂದ ರಕ್ಷಿಸಲು ರಾಜ್ಯ ಸರ್ಕಾರ ತಕ್ಷಣ ಸೂಕ್ತ ಕ್ರಮ ಕೈಗೊಂಡು ರೈತರ ಬದುಕು ಉಳಿಸಬೇಕು ಎಂದು ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಸಮಿತಿ ಮನವಿ ಮಾಡಿದೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಎಂ ಬಸವರಾಜ್, ಮುಖಂಡರಾದ ಮೌನೇಶ್ ಪಿತಗಲ್, ನಾಗಪ್ಪ, ಮೌನೇಶ್ ಬುಡಗಿ, ಜಗದೀಶ್ ತಾಯಪ್ಪ, ಮುಂತಾದವರು ಉಪಸ್ಥಿತರಿದ್ದರು ಇದ್ದರು.






