ಲಿಂಗಸುಗೂರು | ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಹಿಂದುಳಿತ : ಶಶಿಲ್ ಜಿ.ನಮೋಶಿ

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಹಿಂದುಳಿಯುವಂತಾಗಿದ್ದು, ಇದರ ಪರಿಣಾಮವಾಗಿ ಎಸೆಸೆಲ್ಸಿ ಮತ್ತು ಪಿಯುಸಿ ಫಲಿತಾಂಶಗಳಲ್ಲಿ ಈ ಭಾಗ ಹಿನ್ನಡೆಯಲ್ಲಿದೆ. ಆದ್ದರಿಂದ ನಮ್ಮ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಅವರು ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದ ಪದವಿ ಪೂರ್ವ ಪ್ರೌಢ ಶಾಲಾ ವಿಭಾಗದಲ್ಲಿ, ತಾಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಲಿಂಗಸುಗೂರು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ಕಲ್ಯಾಣ ಕರ್ನಾಟಕ ಮುಂದಕ್ಕೆ ಬರಬೇಕಾದರೆ ಶಿಕ್ಷಕರ ಕೊರತೆ ನಿವಾರಣೆ ಅತ್ಯವಶ್ಯಕವಾಗಿದೆ ಎಂದು ಹೇಳಿದರು. ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪಠ್ಯೇತರ ಚಟುವಟಿಕೆಗಳೊಂದಿಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅಗತ್ಯವೆಂದರು.
ಶಾಸಕ ಮಾನಪ್ಪ ವಜ್ಜಲ್ ಅವರು ಮಾತನಾಡಿ, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಸಾಧನೆ ಸಾಧ್ಯ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 19 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅನೇಕ ಶಾಲೆಗಳು ಅತಿಥಿ ಶಿಕ್ಷಕರ ಮೂಲಕ ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರದಲ್ಲಿ ಹೇಗೆ ಮುಂದೆ ಬರಲು ಸಾಧ್ಯ ಎಂದು ಪ್ರಶ್ನಿಸಿದರು. ಸರ್ಕಾರ ಕೂಡಲೇ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸತ್ಯಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತಾ ಹೂನೂರು, ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಬಸವರಾಜ ಕರಡಿ, ಬಸವರಾಜ ಹಂದ್ರಾಳ, ಶರಣಗೌಡ ಅಗಸಿ, ಗುರುಸಂಗಯ್ಯ ಗಣಾಚಾರಿ, ಜಮದಗ್ನಿ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







