ಕುಡಿಯುವ ನೀರು ಪೂರೈಕೆ, ರೈತರ ಬೆಳೆಗಳಿಗೆ ನೀರಾವರಿಗೆ ಆದ್ಯತೆ: ಶಾಸಕ ಬಸನಗೌಡ ದದ್ದಲ್

ರಾಯಚೂರು: ಗಣೇಕಲ್ ಜಲಾಶಯದಿಂದ ರಾಯಚೂರು ನಗರದ ಕೆಳಭಾಗದ ಪ್ರದೇಶಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ನೀರು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆ ಹಾಗೂ ರೈತರ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ತಿಳಿಸಿದ್ದಾರೆ.
ನೀರು ಬಿಡುಗಡೆ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೀರಿನ ಹರಿವು ಹಾಗೂ ವಿತರಣೆಯ ಮೇಲೆ ನಿರಂತರ ನಿಗಾ ವಹಿಸುವಂತೆ ಶಾಸಕ ಬಸನಗೌಡ ದದ್ದಲ್ ಸೂಚಿಸಿದ್ದಾರೆ.
ನೀರಿನ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ, ರೈತರ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೀರನ್ನು ಸಮರ್ಪಕವಾಗಿ ಬಳಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಜನರಿಗೆ ಅಗತ್ಯ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳುವುದು ಹಾಗೂ ರೈತರ ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಸೌಲಭ್ಯ ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ನೀರಿನ ಸಮರ್ಪಕ ವಿತರಣೆ ಮತ್ತು ನಿರ್ವಹಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಬಸನಗೌಡ ದದ್ದಲ್ ತಿಳಿಸಿದ್ದಾರೆ.






