2028ರ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್ಡಿಎ ಸರಕಾರ ಅಧಿಕಾರಕ್ಕೆ ಬರಲಿದೆ : ಬಿ.ವೈ.ವಿಜಯೇಂದ್ರ

Photo credit : X@BYVijayendra
ಲಿಂಗಸುಗೂರು : ಕರ್ನಾಟಕದ ರಾಜಕೀಯ ದಿಕ್ಕನ್ನೇ ಬದಲಿಸುವ ಶಕ್ತಿ ಬಿಜೆಪಿಯ ಐತಿಹಾಸಿಕ ಪಾದಯಾತ್ರೆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಲಿಂಗಸೂರಿನಿಂದ ಆರಂಭವಾದ ಬಿಜೆಪಿ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇದು ಕೇವಲ ರಾಜಕೀಯ ಕಾರ್ಯಕ್ರಮವಲ್ಲ; ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ರೈತ ವಿರೋಧಿ, ದಲಿತ ವಿರೋಧಿ, ಬಡವರ ವಿರೋಧಿ, ಯುವಜನ ಹಾಗೂ ಮಹಿಳಾ ವಿರೋಧಿ ಆಡಳಿತದ ವಿರುದ್ಧದ ಜನಾಂದೋಲನ ಎಂದು ಹೇಳಿದರು.
ಬಿಜೆಪಿ ಯಾಕೆ ಪಾದಯಾತ್ರೆ ಮಾಡುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸುತ್ತಿದ್ದಾರೆ. ನಿಮ್ಮ ಸರ್ಕಾರದ ವೈಫಲ್ಯಗಳೇ ನಮ್ಮ ಪಾದಯಾತ್ರೆಗೆ ಕಾರಣ. ರಾಜ್ಯದ ಜನರ ಹಕ್ಕು, ನ್ಯಾಯ ಮತ್ತು ಭವಿಷ್ಯಕ್ಕಾಗಿ ನಾವು ಬೀದಿಗಿಳಿದಿದ್ದೇವೆ ಎಂದು ವಿಜಯೇಂದ್ರ ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗ ಆರೋಪದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಿರುವುದು ಬಿಜೆಪಿ ಹೋರಾಟದ ಮೊದಲ ಹಂತದ ಜಯ ಎಂದು ವಿಜಯೇಂದ್ರ ಹೇಳಿದರು.
“ದಲಿತರ ಅಭಿವೃದ್ಧಿಗೆ ಮೀಸಲಾದ ಸುಮಾರು 187 ಕೋಟಿ ರೂ. ಹಣದ ದುರುಪಯೋಗದ ಆರೋಪಕ್ಕೆ ಕಾಂಗ್ರೆಸ್ ಸರ್ಕಾರ ಉತ್ತರಿಸಬೇಕು. ಎಸ್ಸಿಪಿ-ಟಿಎಸ್ಪಿ ಯೋಜನೆಗಳ ಹಣ ಬೇರೆಡೆ ವರ್ಗಾವಣೆ ಮಾಡಿದ ಆರೋಪಗಳಿಗೂ ಸ್ಪಷ್ಟನೆ ನೀಡಬೇಕು” ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ದಲಿತ ಸಮುದಾಯದ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ವಾಲ್ಮೀಕಿ ಸಮುದಾಯದ ಯುವಕನ ಹತ್ಯೆ ಸೇರಿದಂತೆ ಹಲವು ಘಟನೆಗಳಲ್ಲಿ ಸರ್ಕಾರ ಗಂಭೀರವಾಗಿ ಸ್ಪಂದಿಸಿಲ್ಲ ಎಂದು ಆರೋಪಿಸಿದ ಅವರು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಮಾನವೀಯವಾಗಿ ನೆರವಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬರದ ಪರಿಸ್ಥಿತಿ ಗಂಭೀರವಾಗಿದ್ದರೂ ಸರ್ಕಾರ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ವಿಜಯೇಂದ್ರ, ಸಾವಿರಾರು ರೈತ ಕುಟುಂಬಗಳು ಸಂಕಷ್ಟದಲ್ಲಿದ್ದು, ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಅವುಗಳನ್ನು ಭರ್ತಿ ಮಾಡುತ್ತಿಲ್ಲ. KPSC ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳ ಆರೋಪಗಳಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿದೆ. ಆದರೆ ಬಿಜೆಪಿಯ “ಆರನೇ ಗ್ಯಾರಂಟಿ” 2028ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬುದಾಗಿದೆ ಎಂದು ವಿಜಯೇಂದ್ರ ಹೇಳಿದರು.
“ಲಿಂಗಸೂರಿನಿಂದ ಆರಂಭವಾದ ಈ ಪಾದಯಾತ್ರೆ ಕರ್ನಾಟಕದ ರಾಜಕೀಯ ಬದಲಾವಣೆಗೆ ಮುನ್ನುಡಿಯಾಗಲಿದೆ. ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಬಿಜೆಪಿ ಹೋರಾಟ ಮುಂದುವರಿಯಲಿದೆ” ಎಂದು ವಿಜಯೇಂದ್ರ ಘೋಷಿಸಿದರು.






