ರಾಯಚೂರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಮಗ್ರ ತನಿಖೆಗೆ ಆಗ್ರಹ

ರಾಯಚೂರು: ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತು ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ಮಹಿಳೆಯ ಅನುಮಾನಾಸ್ಪದ ಸಾವಿನ ಕುರಿತು ಸಮಗ್ರ, ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಎಐಎಂಎಸ್ಎಸ್, ಎಐಡಿವೈಒ ಹಾಗೂ ಎಐಡಿಎಸ್ಒ ಜಿಲ್ಲಾ ಸಮಿತಿಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ, ಯಾವುದೇ ಪ್ರಭಾವಕ್ಕೆ ಒಳಗಾಗದೆ ಎರಡೂ ಪ್ರಕರಣಗಳ ತನಿಖೆ ನಡೆಸಿ, ಕುಟುಂಬಗಳಿಗೆ ತ್ವರಿತ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಅಕ್ರಮ ಮದ್ಯ ಮಾರಾಟ ಹಾಗೂ ಅಶ್ಲೀಲತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಹಶೀಲ್ದಾರ್ ಪರಶುರಾಮ ಪ್ರತಿಭಟನಾಕಾರರ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಚನ್ನಬಸವ ಜಾನೇಕಲ್, ಸರೋಜಾ ಗೋನವಾರ, ಬಸವರಾಜ್, ವಿನೋದ್ ಕುಮಾರ್ ನಂದಗೋಪಾಲ್, ಶಿವಪ್ಪ ಅಸ್ಕಿಹಾಳ್, ಅಭಿಲಾಷ್ ಅಲಬನೂರು ಸೇರಿದಂತೆ ಹಲವರು ಭಾಗವಹಿಸಿದ್ದರು.




