Raichur | ಬಿಎಸ್‌ಪಿ ಮುಖಂಡ ಭೂಮಾನಂದ ಹದ್ದಿನಾಳ ಹತ್ಯೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ದೇವದುರ್ಗ (ರಾಯಚೂರು) : ತಾಲೂಕಿನ ಸಂಕೇಶ್ವರಹಾಳ ಗ್ರಾಮದಲ್ಲಿ ಬಿಎಸ್‌ಪಿ ಮುಖಂಡ ಭೂಮಾನಂದ ಹದ್ದಿನಾಳ ಅವರ ಭೀಕರ ಹತ್ಯೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ಬುಧವಾರ ಸಂಜೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದರಿಂದ ಪ್ರತಿಭಟನೆ ವಿಳಂಬವಾಗಿ ಆರಂಭವಾಯಿತು. ಎಫ್‌ಐಆರ್ ದಾಖಲಿಸುವಲ್ಲಿಯೂ ವಿಳಂಬವಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ರಾತ್ರಿ ವೇಳೆಯವರೆಗೂ ಧರಣಿ ಮುಂದುವರಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರತಿಭಟನಾಕಾರರು ಮಾತನಾಡಿ, ಈ ಹತ್ಯೆಯ ಹಿಂದೆ ದೊಡ್ಡ ಸಂಚು ಇರುವ ಶಂಕೆ ವ್ಯಕ್ತವಾಗಿದ್ದು, ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ತನಿಖೆಯ ದಿಕ್ಕು ತಪ್ಪಿಸಿದರೆ ರಾಜ್ಯವ್ಯಾಪಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಹೋರಾಟಗಾರರಾದ ಅಂಬಣ್ಣ ಅರೋಲಿಕರ್, ನರಸಪ್ಪ ದಂಡೋರ, ಹನುಮಂತಪ್ಪ ಕಾಕರಗಲ್ ಸೇರಿದಂತೆ ಹಲವರು ಮಾತನಾಡಿ, ಹಾಡಹಗಲೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಯುವಕನನ್ನು ಕೊಲೆ ಮಾಡಿರುವುದು ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ. ಯಾವುದೇ ವೈಷಮ್ಯಕ್ಕೂ ಕೊಲೆಯೇ ಪರಿಹಾರವಲ್ಲ. ಭಿನ್ನಾಭಿಪ್ರಾಯಗಳನ್ನು ಕಾನೂನು ಚೌಕಟ್ಟಿನಲ್ಲಿಯೇ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಮೃತ ಭೂಮಾನಂದ ಅವರ ಕುಟುಂಬಕ್ಕೆ ಸರ್ಕಾರದಿಂದ ತಕ್ಷಣ ಪರಿಹಾರ ನೀಡಬೇಕು. ಆರೋಪಿಗಳ ವಿರುದ್ಧ ಕೊಲೆ ಪ್ರಕರಣದ ಜೊತೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ (ಅಟ್ರಾಸಿಟಿ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಈ ನಡುವೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಲಾಗಿದೆ. ಮೃತನ ಸಹೋದರರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದು, ನೇರ ಹಾಗೂ ಪರೋಕ್ಷವಾಗಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಪೊಲೀಸರು ತಿಳಿಸಿದ್ದಾರೆ.






