Raichur | ಕಲ್ಯಾಣ ಕರ್ನಾಟಕದಲ್ಲಿ 28 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ : ಡಾ.ಬಿ.ಪಿ.ನಿರಂಜನ ಆರಾಧ್ಯ
‘ಸ್ಕೂಲ್ ಠೀಕ್ ಕರೋ’ ಅಭಿಯಾನಕ್ಕೆ ಚಾಲನೆ

ರಾಯಚೂರು : ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿಯಿಂದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ. ಶಿಕ್ಷಕರ ಕೊರತೆ ನಿವಾರಿಸಿ ಮೂಲಸೌಕರ್ಯ ಕಲ್ಪಿಸುವ ಉದ್ದೇಶದಿಂದ ‘ಸ್ಕೂಲ್ ಠೀಕ್ ಕರೋ’ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಶಿಕ್ಷಣ ತಜ್ಞ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆಯ ಸಂಸ್ಥಾಪಕ ಗೌರವಾಧ್ಯಕ್ಷ ಡಾ. ಬಿ.ಪಿ. ನಿರಂಜನ ಆರಾಧ್ಯ ಹೇಳಿದರು.
ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ, ಭಾರತ ಜ್ಞಾನ ವಿಜ್ಞಾನ ಸಮಿತಿ ಹಾಗೂ ಎಲ್‌ಐಸಿ–ಎಚ್‌ಎಫ್‌ಎಲ್ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಖಾಲಿ ಇರುವ ಸುಮಾರು 60 ಸಾವಿರ ಶಿಕ್ಷಕರ ಹುದ್ದೆಗಳ ಪೈಕಿ 28 ಸಾವಿರ ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿವೆ. ರಾಯಚೂರು ಜಿಲ್ಲೆಯಲ್ಲೇ 6 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿಯಾಗಿವೆ ಎಂದು ಅವರು ತಿಳಿಸಿದರು.
ಒಂದು ಕಡೆ ಮಕ್ಕಳ ಸಂಖ್ಯೆ ಕಡಿಮೆ ಎಂಬ ಕಾರಣಕ್ಕೆ ಶಾಲೆಗಳನ್ನು ಮುಚ್ಚಲಾಗುತ್ತಿದೆ. ಮತ್ತೊಂದೆಡೆ ಮಕ್ಕಳಿದ್ದರೂ ಶಿಕ್ಷಕರಿಲ್ಲ, ತರಗತಿ ಕೊಠಡಿಗಳು, ಆಟದ ಮೈದಾನ, ಶೌಚಾಲಯ, ಕುಡಿಯುವ ನೀರು, ಕ್ರೀಡಾ ಸಾಮಗ್ರಿ ಹಾಗೂ ಪೀಠೋಪಕರಣಗಳ ಕೊರತೆ ಇದೆ. ಇದರಿಂದ ಈ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರ ಜವಾಬ್ದಾರಿ ಹೆಚ್ಚಾಗಿದೆ. ಶಾಲೆಗಳ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಾಗಾರಗಳನ್ನು ಆಯೋಜಿಸಿ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಎಸ್‌ಡಿಎಂಸಿ ಚಿಂತನ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಜಯಣ್ಣ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಲು ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಕರೆ ನೀಡಿದರು.
ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನು ಸಮರ್ಪಕವಾಗಿ ಜಾರಿಗೊಳಿಸುವ ಜತೆಗೆ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಸಮುದಾಯದ ಸಹಕಾರದಿಂದ ಒದಗಿಸಿ, ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಎಸ್‌ಡಿಎಂಸಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ರಾಜ್ಯ ಕಾರ್ಯದರ್ಶಿ ಶುಭಂಕರ್, ರಾಜ್ಯ ಕಾರ್ಯದರ್ಶಿ ಸೈಯದ್ ಹಫಿಜುಲ್ಲಾ, ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಸಂಚಾಲಕಿ ವಿರೂಪಮ್ಮ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ವ್ಯವಸ್ಥಾಪಕ ಸುರೇಶ್ ಹಾಗೂ ಕೊಪ್ಪಳ ಜಿಲ್ಲಾ ಎಸ್‍ಡಿಎಂಸಿ ಸಮನ್ವಯ ವೇದಿಕೆಯ ಅಧ್ಯಕ್ಷ ದೇವರಾಜ್ ಕಿನ್ನಾಳ ಉಪಸ್ಥಿತರಿದ್ದರು.






