ರಾಯಚೂರು | ಉಪಹಾರದ ಬಳಿಕ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 34 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಾನ್ವಿ: ಪಟ್ಟಣದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ಬುಧವಾರ ಬೆಳಿಗ್ಗಿನ ಉಪಹಾರ ಸೇವಿಸಿದ ಬಳಿಕ 34 ವಿದ್ಯಾರ್ಥಿಗಳು ಅಸ್ಪಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಮಾನ್ವಿಯ ಮುಷ್ಟೂರು ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿದ ನಂತರ ವಿದ್ಯಾರ್ಥಿಗಳಲ್ಲಿ ತೀವ್ರವಾದ ಹೊಟ್ಟೆನೋವು , ಭೇದಿಯಾಗಿದೆ. ತಕ್ಷಣ ವಸತಿ ಶಾಲೆಯ ಅಧಿಕಾರಿಗಳು ವೈದ್ಯರಿಗೆ ಮಾಹಿತಿ ನೀಡಿದರು.
34 ವಿದ್ಯಾರ್ಥಿಗಳ ಪೈಕಿ 24 ವಿದ್ಯಾರ್ಥಿಗಳನ್ನು ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇಬ್ಬರು ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಬಿಇಒ ಚಂದ್ರಶೇಖರ ದೊಡ್ಡಮನಿ, ಬಿಸಿಎಂ ಇಲಾಖೆಯ ಅಧಿಕಾರಿ ಭಾಗಯ್ಯ ನಾಯಕ, ತಾಲ್ಲೂಕು ಪಂಚಾಯಿತಿ ಅಧಿಕಾರಿ ದೀಪಾ ಮತ್ತಿತರ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
Next Story




