Raichur | 8.76 ಲಕ್ಷ ರೂ. ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಜೆಸ್ಕಾಂ

ರಾಯಚೂರು: ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ.ಬಿ.ಆರ್.ಅಂಬೇಡ್ಕರ್ ಪರಿಶಿಷ್ಟ ಜಾತಿ ಬಾಲಕರ ಮೆಟ್ರಿಕ್ ವಸತಿ ನಿಲಯದಲ್ಲಿ ವಿದ್ಯುತ್ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ಜೆಸ್ಕಾಂ ಅಧಿಕಾರಿಗಳು ಬುಧವಾರ ಮಧ್ಯಾಹ್ನ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಇದರಿಂದ ವಸತಿ ನಿಲಯದಲ್ಲಿ ಆಶ್ರಯ ಪಡೆದಿರುವ ವಿದ್ಯಾರ್ಥಿಗಳು ಕತ್ತಲಿನಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ.
ಲಭ್ಯವಿರುವ ವಿದ್ಯುತ್ ಬಿಲ್ ವಿವರಗಳ ಪ್ರಕಾರ, ವಸತಿ ನಿಲಯಕ್ಕೆ 8,76,223 ರೂ. ವಿದ್ಯುತ್ ಬಿಲ್ ಬಾಕಿ ಉಳಿದಿದೆ. ಈ ಸಂಬಂಧ ಜೆಸ್ಕಾಂ ಅಧಿಕಾರಿಗಳು ಹಲವು ಬಾರಿ ನೋಟಿಸ್ ನೀಡಿದ್ದರೂ ಸ್ಪಂದಿಸದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಇಷ್ಟೊಂದು ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಯಲು ಕಾರಣವೇನು? ಬಿಲ್ ಪಾವತಿಯಲ್ಲಿ ವಿಳಂಬವಾಗಿದ್ದೇಕೆ? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದು ಸರ್ಕಾರದ ನಿರ್ಲಕ್ಷ್ಯವೋ ಅಥವಾ ಸಂಬಂಧಪಟ್ಟ ಅಧಿಕಾರಿಗಳ ಬೇಜವಾಬ್ದಾರಿಯೋ ಎಂಬುದು ಸ್ಪಷ್ಟವಾಗಬೇಕಿದೆ.
ಸರ್ಕಾರಿ ವಸತಿ ನಿಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮೂಲಸೌಕರ್ಯಗಳ ಕೊರತೆಯಿಂದ ತೊಂದರೆ ಅನುಭವಿಸುವಂತಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ವಿದ್ಯುತ್ ಬಿಲ್ ಪಾವತಿಗೆ ಸಂಬಂಧಿಸಿದ ಸಮಸ್ಯೆಯನ್ನು ಶೀಘ್ರ ಬಗೆಹರಿಸಿ, ವಸತಿ ನಿಲಯದ ವಿದ್ಯುತ್ ಸಂಪರ್ಕವನ್ನು ಪುನಃ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಆಡಳಿತ ವ್ಯವಸ್ಥೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂಬ ಒತ್ತಾಯ ವ್ಯಕ್ತವಾಗಿದೆ.






