Raichur | ಜಿಲ್ಲಾ ನಿರ್ಮಿತಿ ಕೇಂದ್ರದ ಕಾಮಗಾರಿಗಳಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಚನ್ನಬಸವ ಆರೋಲಿ ಆಗ್ರಹ

ರಾಯಚೂರು: ಜಿಲ್ಲಾ ನಿರ್ಮಿತಿ ಕೇಂದ್ರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ನಿಯಮಬಾಹಿರವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಎಸ್‌ಇಪಿ ಅನುದಾನದ ನಿಯಮಗಳನ್ನೂ ಉಲ್ಲಂಘಿಸಲಾಗಿದೆ. ಜಿಲ್ಲಾಧಿಕಾರಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಹಣಕಾಸಿನ ವ್ಯವಹಾರಗಳ ಕುರಿತು ತನಿಖೆಗೆ ಮಾತ್ರ ಆದೇಶಿಸಿದ್ದಾರೆ. ಕೂಡಲೇ ಸಮಗ್ರ ತನಿಖೆ ಕೈಗೊಂಡು ಮೋಹನ ಕೃಷ್ಣ ಹಾಗೂ ಇತರ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕು ಎಂದು ಸಾಮಾಜಿಕ ಹೋರಾಟಗಾರ ಚನ್ನಬಸವ ಆರೋಲಿ ಆಗ್ರಹಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿ ಕೆಕೆಆರ್‌ಡಿಬಿಯ ಎಸ್‌ಇಪಿ ಯೋಜನೆಯಡಿ 75 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಜಿಲ್ಲಾ ನಿರ್ಮಿತಿ ಕೇಂದ್ರ ನಿರ್ವಹಿಸಿದೆ. ಆದರೆ, ಅಲ್ಲಿ ಪರಿಶಿಷ್ಟ ಜಾತಿಯ ಜನರು ವಾಸಿಸುತ್ತಿಲ್ಲ. ಸಮುದಾಯದ ಜನರೇ ಇಲ್ಲದ ಜಮೀನಿನಲ್ಲಿ ರಸ್ತೆ ನಿರ್ಮಿಸಲಾಗಿದ್ದು, ಹಣ ದುರ್ಬಳಕೆಯಾಗಿರುವ ಶಂಕೆಯಿದೆ ಎಂದು ಆರೋಪಿಸಿದರು.
ರಾಯಚೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ. ಬಾಬು ಜಗಜೀವನರಾಂ ಸಮುದಾಯ ಭವನಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಮತ್ತು ಧ್ವನಿವರ್ಧಕಗಳ ಅಳವಡಿಕೆಗೆ ಒಂದು ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಕಾಮಗಾರಿಗಳಲ್ಲಿ ಕೆಪಿಟಿಟಿ ಕಾಯ್ದೆಯನ್ನು ಉಲ್ಲಂಘಿಸಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಒಬ್ಬರೇ ಬಿಡ್‌ದಾರರು ಭಾಗವಹಿಸಿದ್ದರೂ ಮರು ಟೆಂಡರ್ ನಡೆಸದೆ ಅವರಿಗೆ ಟೆಂಡರ್ ನೀಡಿರುವುದು ಕಾನೂನುಬಾಹಿರವಾಗಿದೆ ಎಂದು ದೂರಿದರು.
ಜಿಲ್ಲಾ ನಿರ್ಮಿತಿ ಕೇಂದ್ರವು ಸಮರ್ಪಕವಾಗಿ ಕಾಮಗಾರಿಗಳನ್ನು ನಿರ್ವಹಿಸದೆ ಉಪಗುತ್ತಿಗೆ ನೀಡಿರುವುದು ಅಕ್ರಮಕ್ಕೆ ನಿದರ್ಶನವಾಗಿದೆ. ಈ ಎಲ್ಲ ಆರೋಪಗಳ ಕುರಿತು ಜಿಲ್ಲಾಧಿಕಾರಿಗಳು ಸಮಗ್ರ ತನಿಖೆಗೆ ಆದೇಶಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಚನ್ನಬಸವ ಆರೋಲಿ ಒತ್ತಾಯಿಸಿದರು.






