Raichur | ಮೃತಪಟ್ಟ, ನಿವೃತ್ತ ಶಿಕ್ಷಕರಿಗೂ ವೇತನ ಪಾವತಿ ಆರೋಪ: ಬಿಇಒ ವಿರುದ್ಧ ಕ್ರಮಕ್ಕೆ ಆಗ್ರಹ

ರಾಯಚೂರು: ಮೃತಪಟ್ಟ ಹಾಗೂ ನಿವೃತ್ತಿ ಹೊಂದಿದ ಶಿಕ್ಷಕರಿಗೂ ವೇತನ ಪಾವತಿಸಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿ ಈರಣ್ಣ ಕೊಸಗಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಜಿಲ್ಲಾ ಕಾರ್ಯದರ್ಶಿ ಕಲ್ಯಾಣರಾಯ ತಳವಾರ ಆಗ್ರಹಿಸಿದರು.
ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಯಂ ನಿವೃತ್ತಿ ಹೊಂದಿದ ಶಿಕ್ಷಕರಿಗೂ ವೇತನ ಪಾವತಿಸುವ ಮೂಲಕ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟುಮಾಡಲಾಗಿದೆ. ಈ ಕುರಿತು ಹಲವು ಅಕ್ರಮಗಳ ಬಗ್ಗೆ ಲಿಖಿತ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಎಚ್ಚರಿಸಿದರು.
ಶಿಕ್ಷಕರ ನಿಯೋಜನೆ, ಪೂರ್ವಾನುಮತಿ ಪಡೆಯದೆ ಹಣ ಬಳಕೆ ಹಾಗೂ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿಯೂ ಸರ್ಕಾರದ ನಿಯಮ ಮತ್ತು ಸೂಚನೆಗಳನ್ನು ಪಾಲಿಸದಿರುವ ಕುರಿತು 150 ಪುಟಗಳ ದೂರು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರಣ ಕೇಳಿ ನೋಟಿಸ್ ನೀಡಲಾಗಿದ್ದರೂ, ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣವನ್ನು ಬಾಕಿ ಉಳಿಸಿಕೊಂಡು ಅಧಿಕಾರಿಗೆ ರಕ್ಷಣೆ ನೀಡಲಾಗುತ್ತಿದೆ ಎಂದು ದೂರಿದರು.
ಈರಣ್ಣ ಕೊಸಗಿ ವಿರುದ್ಧ ದೂರು ಸಲ್ಲಿಸಿ ಮೂರು ತಿಂಗಳು ಕಳೆದಿದ್ದರೂ ಕ್ರಮ ಕೈಗೊಳ್ಳದಿರುವುದಕ್ಕೆ ಕಾರಣವೇನು ಎಂದು ಪ್ರಶ್ನಿಸಿದ ಅವರು, ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟುಮಾಡಿ ನಿಯಮ ಹಾಗೂ ಶಿಸ್ತು ಉಲ್ಲಂಘಿಸಿರುವ ಆರೋಪ ಎದುರಿಸುತ್ತಿರುವ ಈರಣ್ಣ ಕೊಸಗಿ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಇಲ್ಲದಿದ್ದರೆ ಕಾನೂನುಬದ್ಧ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.






