Raichur | ವಾಸ್ತವ ಪರಿಸ್ಥಿತಿ ಅರಿತು ಕುಡಿಯುವ ನೀರು, ಮೇವು ಸಮಸ್ಯೆ ಬಗೆಹರಿಸಿ : ಸಚಿವ ಅಜಯ್ ಸಿಂಗ್

ರಾಯಚೂರು: ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಯ ಕುರಿತು ವಾಸ್ತವ ಪರಿಸ್ಥಿತಿಯನ್ನು ಅರಿತು ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅಧಿಕಾರಿಗಳಿಗೆ ಸಲಹೆ ನೀಡಿದರು.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಬರ ಪರಿಸ್ಥಿತಿ ಕುರಿತ ಅಧಿಕಾರಿಗಳ ಸಭೆಯಲ್ಲಿ ಶಾಸಕರಾದ ಬಸನಗೌಡ ದದ್ದಲ್, ಹಂಪನಗೌಡ ಬಾದರ್ಲಿ, ಬಸನಗೌಡ ತುರ್ವಿಹಾಳ, ಹಂಪಯ್ಯ ನಾಯಕ ಸಾಹುಕಾರ ಅವರು ತಮ್ಮ ಕ್ಷೇತ್ರಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ವಾಸ್ತವ ಪರಿಸ್ಥಿತಿಯನ್ನು ಸಭೆಯ ಗಮನಕ್ಕೆ ತಂದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
4 ವರ್ಷವಾದರೂ ಜಲಧಾರೆ ಕಾಮಗಾರಿ ಪೂರ್ಣಗೊಂಡಿಲ್ಲ :
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, 2020ರಲ್ಲಿ ಜಲಧಾರೆ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, 2024ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ ಇದುವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ಸುಮಾರು 1,406 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಜಲಧಾರೆ ಯೋಜನೆ ಕಾಮಗಾರಿ ಏಕೆ ವಿಳಂಬವಾಗುತ್ತಿದೆ, ಅಧಿಕಾರಿಗಳು ಈ ಕುರಿತು ಪರಿಶೀಲನೆ ನಡೆಸಿದ್ದಾರೆಯೇ ಎಂಬುದನ್ನು ಸಚಿವರು ಗಮನಿಸಬೇಕು ಎಂದು ಒತ್ತಾಯಿಸಿದರು.
ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ ಮಾತನಾಡಿ, ಜಲಧಾರೆ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ನಾಮಫಲಕಗಳನ್ನು ಅಳವಡಿಸಿಲ್ಲ. ರಸ್ತೆ ಬದಿಯಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಗಳು ಸರಿಯಾಗಿ ಕಾಣದೆ ಅಪಘಾತಗಳು ಸಂಭವಿಸುತ್ತಿವೆ. ಇಂತಹ ಅನಾಹುತಗಳಿಗೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಭೀಕರ ಬರ: 11 ಕೋಟಿ ರೂ. ಬಿಡುಗಡೆ :
ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ 11 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದೆ. ಬೋರ್‌ವೆಲ್‌ಗಳನ್ನು ಕೊರೆಸಲಾಗಿದ್ದು, ಅಗತ್ಯವಿರುವ ಕಡೆ ನೀರಿನ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಸಲಾಗುತ್ತಿದೆ. ಹಲವೆಡೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ. ಪಿಡಿ ಖಾತೆಯಿಂದ ಮತ್ತಷ್ಟು ಅನುದಾನ ತರಲಾಗುವುದು. ಸಂಬಂಧಿಸಿದ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಇನ್ನೂ ಅಗತ್ಯವಿದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ಸಚಿವ ಡಾ. ಅಜಯ್ ಸಿಂಗ್ ಹೇಳಿದರು.
ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಬೇಕು. ಕಚೇರಿಯಲ್ಲಿ ಕುಳಿತು ಕಡತಗಳನ್ನು ಸಿದ್ಧಪಡಿಸುವ ಬದಲು ವಾಸ್ತವ ಪರಿಸ್ಥಿತಿಯನ್ನು ಅರಿತು ಸಮಸ್ಯೆ ಬಗೆಹರಿಸಬೇಕು ಎಂದು ಸಲಹೆ ನೀಡಿದರು.
ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಯುವ ಸಂದರ್ಭದಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ನೀಡಿದ ಮಾಹಿತಿಗೆ ಶಾಸಕರಾದ ಬಸನಗೌಡ ದದ್ದಲ್, ಹಂಪಯ್ಯ ನಾಯಕ ಹಾಗೂ ಕರೆಮ್ಮ ಜಿ. ನಾಯಕ ಅವರು ಅತೃಪ್ತಿ ವ್ಯಕ್ತಪಡಿಸಿದರು. ಅಧಿಕಾರಿಗಳು ಕೊಠಡಿಯಲ್ಲಿ ಕುಳಿತು ವರದಿ ಸಿದ್ಧಪಡಿಸಿದ್ದಾರೆ. ವಾಸ್ತವವಾಗಿ ಯಾವ ರೈತರ ಬಳಿ ಮೇವಿನ ಕೊರತೆಯಿಂದ ಜಾನುವಾರುಗಳಿಗೆ ಸಮಸ್ಯೆ ಉಂಟಾಗಿದೆ ಎಂಬುದನ್ನು ಪರಿಶೀಲಿಸಿಲ್ಲ. ರೈತರು ಪಕ್ಕದ ರಾಜ್ಯಗಳಿಗೆ ತೆರಳಿ ಮೇವು ತರುತ್ತಿದ್ದಾರೆ. ಸಭೆಗೆ ಸುಳ್ಳು ಮಾಹಿತಿ ನೀಡಿ ದಿಕ್ಕು ತಪ್ಪಿಸಬಾರದು. ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಂಪನಗೌಡ ಬಾದರ್ಲಿ, ಶಾಸಕಿ ಕರೆಮ್ಮ ಜಿ. ನಾಯಕ ಸೇರಿದಂತೆ ಹಲವರು ಒತ್ತಾಯಿಸಿದರು.
ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು ಮಾತನಾಡಿ, ಜೋಳ ಖರೀದಿ ಕೇಂದ್ರಗಳ ಮೂಲಕ ಜೋಳ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ಪಾವತಿಯಾಗದಿರುವ ಕುರಿತು ಈಗಾಗಲೇ ಸಂಬಂಧಿಸಿದ ಸಚಿವರೊಂದಿಗೆ ಚರ್ಚಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಹಣ ಪಾವತಿಸಲಾಗುವುದು ಎಂದು ತಿಳಿಸಿದರು.
ತುಂಗಭದ್ರಾ ಎಡದಂಡೆ ಕಾಲುವೆಯ ಮೇಲ್ಭಾಗ ಹಾಗೂ ಕೆಳಭಾಗದ ರೈತರಿಗೂ ನೀರು ತಲುಪಬೇಕು. ನೀರಾವರಿ ಸಲಹಾ ಸಮಿತಿಯ ತೀರ್ಮಾನದಂತೆ ಎಲ್ಲರಿಗೂ ನ್ಯಾಯ ಒದಗಿಸಬೇಕು. ಅಕ್ರಮ ನೀರಾವರಿ ತಡೆಯಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳುವ ತೀರ್ಮಾನಕ್ಕೆ ಎಲ್ಲರೂ ಸಹಕಾರ ನೀಡಬೇಕು. ಯಾರೂ ಅಧಿಕಾರ ಚಲಾಯಿಸಿ ಅಥವಾ ಒತ್ತಡ ಹೇರಿ ಇದಕ್ಕೆ ಅಡ್ಡಿಪಡಿಸಬಾರದು ಎಂದು ಹೇಳಿದರು.
ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಲಾಶಯದ ನೀರಿಗೆ ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಸೂಚನೆ ನೀಡಲಾಗಿದೆ. ನೀರಾವರಿ ಇಲಾಖೆ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಗಮನಿಸಿ ಆಡಳಿತಕ್ಕೆ ಸೂಕ್ತ ಸಲಹೆ ನೀಡಬೇಕು. ಮೇಲ್ಭಾಗ, ಕೆಳಭಾಗ ಹಾಗೂ ಕುಡಿಯುವ ನೀರಿಗೆ ಅವಲಂಬಿತ ಪ್ರದೇಶಗಳಿಗೆ ಆದ್ಯತೆ ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಉಪಕಾಲುವೆಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ಆದರೆ ರಸ್ತೆಗಿಳಿದು ಶಾಸಕರ ನೇತೃತ್ವದಲ್ಲಿ ಹೋರಾಟ ನಡೆಸಿದರೆ ಕರ್ತವ್ಯ ನಿರ್ವಹಿಸುವಲ್ಲಿ ಸಮಸ್ಯೆಯಾಗುತ್ತದೆ ಎಂದು ಹೇಳಿದರು.






