Raichur | ಐಪಿಎಲ್ ಸಂಭ್ರಮಾಚರಣೆ ವೇಳೆ ಘರ್ಷಣೆ: ಇಬ್ಬರ ಬಂಧನ, 14 ಮಂದಿಯ ವಿರುದ್ಧ ಪ್ರಕರಣ ದಾಖಲು

ರಾಯಚೂರು: ಐಪಿಎಲ್ ಕ್ರಿಕೆಟ್ ಪಂದ್ಯದ ಸಂಭ್ರಮಾಚರಣೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, 14 ಮಂದಿಯ ವಿರುದ್ಧ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಗರದ ಜಲಾಲನಗರ ಪ್ರದೇಶದಲ್ಲಿ ನಡೆದ ಘರ್ಷಣೆಯಲ್ಲಿ ರಾಘವೇಂದ್ರ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಹಳೆಯ ದ್ವೇಷದ ಹಿನ್ನೆಲೆ ಬೈಕ್‌ಗಳಲ್ಲಿ ಬಂದ ಯುವಕರ ಗುಂಪೊಂದು ಹಲವರ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ವಿನಯ ಹಾಗೂ ಪ್ರಭಾಕರ ರೆಡ್ಡಿ ಎಂಬ ಇಬ್ಬರನ್ನು ಮಾರ್ಕೆಟ್ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ. ಘರ್ಷಣೆ ಪ್ರಕರಣವನ್ನು ರಾಜಕೀಯ ಪ್ರಭಾವ ಬಳಸಿ ಮುಚ್ಚಿಹಾಕಲು ಯತ್ನಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಸಹ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.




