ರಾಯಚೂರು | ನ್ಯಾಷನಲ್ ಹೆರಾಲ್ಡ್ ಹೆಸರಿನಲ್ಲಿ ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ರಾಯಚೂರು: ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಕೇಸ್ ಹಾಕಿ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ನಗರದ ಮಂತ್ರಾಲಯ ರಸ್ತೆಯಲ್ಲಿರುವ ರೇಡಿಯೋ ಸ್ಟೇಷನ್ ಬಳಿಯ ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಹಾಕಿ ತಡೆದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿ ಅವರು ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ (ಈಡಿ), ಸಿಬಿಐಯಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದಾರೆ. ಈ ಹಿಂದೆ ನ್ಯಾಷನಲ್ ಹೆರಾಲ್ಡ್ ನಲ್ಲಿ ಏನು ಆಗದಿದ್ದರೂ ಭ್ರಷ್ಟಾಚಾರ, ಮನಿ ಲಾಂಡ್ರಿಂಗ್ ಹಾಗೂ ಇತರೆ ಕಾರಣಗಳನ್ನು ನೀಡಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ವಿರುದ್ಧ ದ್ವೇಷದ ರಾಜಕಾರಣ ಮಾಡಿ ವಿಚಾರಣೆಗೆ ಪದೇ ಪದೇ ಕರೆಸಿ ಈಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಕೆ.ಶಾಂತಪ್ಪ, ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯಾರ್ಥಿ ಮುಹಮ್ಮದ್ ಶಾಲಂ, ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತಾರ ಡಾ.ರಝಾಕ್ ಉಸ್ತಾದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಶಶಿಕಲಾ ಭೀಮರಾಯ, ಸೈಯದ್ ದಸ್ತಗೀರ್ ಮತ್ತಿತರರು ಪಾಲ್ಗೊಂಡಿದ್ದರು.







