Raichur | ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನ.26ರಿಂದ ಅಹೋರಾತ್ರಿ ಧರಣಿ : ವಿದ್ಯಾ ಪಾಟೀಲ್

ರಾಯಚೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸಮರ್ಪಕವಾಗಿ ಜಾರಿಗೊಳಿಸುವುದು, ಸರ್ಕಾರಿ ಶಾಲೆಗಳಲ್ಲಿ ಖಾಯಂ ಶಿಕ್ಷಕರನ್ನು ನೇಮಕ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 26ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಸರ್ಕಾರಿ ಶಾಲಾ ಅಭಿವೃದ್ಧಿ ವೇದಿಕೆ ಸಂಚಾಲಕಿ ವಿದ್ಯಾ ಪಾಟೀಲ್ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 62,420ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಅಲ್ಲದೆ, 7,630 ಶಾಲೆಗಳು ಏಕೋಪಾಧ್ಯಾಯ ಶಾಲೆಗಳಾಗಿವೆ. ಹಲವು ಜಿಲ್ಲೆಗಳಲ್ಲಿ ಶಿಕ್ಷಕರೇ ಇಲ್ಲದ ಶಾಲೆಗಳಿದ್ದು, ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕೊಂದರಲ್ಲೇ 105 ಶಾಲೆಗಳಲ್ಲಿ ಶಿಕ್ಷಕರ ಕೊರತೆ ಗಂಭೀರವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿಯೂ ಸುಮಾರು 26 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಸರ್ಕಾರಿ ಶಾಲೆಗಳಲ್ಲಿ ಮುಖ್ಯವಾಗಿ ಬಡ, ದಲಿತ, ಹಿಂದುಳಿದ, ಆದಿವಾಸಿ, ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳು ಹಾಗೂ ಬಡ ಕುಟುಂಬಗಳ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂತಹ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕು. ಶಿಕ್ಷಕರ ಕೊರತೆ ಹಾಗೂ ಮೂಲಸೌಕರ್ಯಗಳ ಅಭಾವದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.
ಶಿಕ್ಷಣ ಹಕ್ಕು ಕಾಯ್ದೆಯ ನಿಯಮದಂತೆ 1ರಿಂದ 5ನೇ ತರಗತಿಯ ಮಕ್ಕಳಿಗೆ ನೆರೆಹೊರೆಯಲ್ಲಿಯೇ ಶಾಲೆ ಹಾಗೂ 6ರಿಂದ 8ನೇ ತರಗತಿಯ ಮಕ್ಕಳಿಗೆ ನಿಗದಿತ ಅಂತರದೊಳಗೆ ಶಾಲೆ ಲಭ್ಯವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಶಾಲೆಗಳ ವಿಲೀನ ಅಥವಾ ಮುಚ್ಚುವಿಕೆಯ ಸಂದರ್ಭದಲ್ಲಿ ಈ ನಿಯಮಗಳನ್ನು ಉಲ್ಲಂಘಿಸಬಾರದು ಎಂದು ಆಗ್ರಹಿಸಿದರು.
ಶಿಕ್ಷಣ ಹಕ್ಕು ಕಾಯ್ದೆ ಜಾರಿಯಾದ ನಂತರವೂ ಅನೇಕ ಸರ್ಕಾರಿ ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಾಲಯ, ಆಟದ ಮೈದಾನ, ಗ್ರಂಥಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಮುಂದುವರಿದಿದೆ. ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಮೊದಲು ಶಿಕ್ಷಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ, ತರಗತಿವಾರು ಹಾಗೂ ವಿಷಯವಾರು ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಆರ್‌ಟಿಇ ಎಷ್ಟರ ಮಟ್ಟಿಗೆ ಸಮರ್ಪಕವಾಗಿ ಅನುಷ್ಠಾನಗೊಂಡಿದೆ ಎಂಬುದನ್ನು ಪರಿಶೀಲಿಸಲು ಶಿಕ್ಷಣ ತಜ್ಞರ ರಾಜ್ಯಮಟ್ಟದ ಸಮಿತಿ ರಚಿಸಿ ಶ್ವೇತಪತ್ರ ಹೊರಡಿಸಬೇಕು. ಸರ್ಕಾರ ತಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಬಡ ಹಾಗೂ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಂತೇಶ, ಮಲ್ಲೇಶ್, ಸ್ವಪ್ನ ದೀಪ, ಶೈನಾಝ್ ಹಾಗೂ ಸೈಯದ್ ಹಫೀಜುಲ್ಲಾ ಉಪಸ್ಥಿತರಿದ್ದರು.






