Raichur | ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹ; ಎನ್‌ಟಿಎ ರದ್ದತಿಗೆ ಒತ್ತಾಯ

ರಾಯಚೂರು: ಪರಿಸರವಾದಿ, ವಿಜ್ಞಾನಿ ಹಾಗೂ ಶಿಕ್ಷಣತಜ್ಞ ಸೋನಂ ವಾಂಗ್ಚುಕ್ ಅವರನ್ನು ಪೊಲೀಸರು ಪ್ರತಿಭಟನಾ ಸ್ಥಳದಿಂದ ಬಲವಂತವಾಗಿ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿರುವುದನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್ಓ) ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಸಂಜೆ ನಗರದ ಭಗತ್ ಸಿಂಗ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿರುವುದು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಎನ್‌ಟಿಎ ರದ್ದುಪಡಿಸಬೇಕು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು, ಶಿಕ್ಷಣದ ಖಾಸಗೀಕರಣ ಹಾಗೂ ಕೋಮುವಾದೀಕರಣ ನಿಲ್ಲಿಸಬೇಕು ಮತ್ತು ಶಾಂತಿಯುತ ಪ್ರತಿಭಟನೆಗಳ ಮೇಲಿನ ದಮನವನ್ನು ಕೊನೆಗೊಳಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಅಧ್ಯಕ್ಷ ಹಯ್ಯಾಳಪ್ಪ, ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ತೆರವುಗೊಳಿಸಲು ಭಾರೀ ಪೊಲೀಸ್ ಪಡೆಯನ್ನು ಬಳಸಿರುವುದು ಖಂಡನೀಯ. ಪ್ರಜಾಪ್ರಭುತ್ವದಲ್ಲಿ ಪ್ರತಿಭಟನಾಕಾರರೊಂದಿಗೆ ಸರ್ಕಾರ ಸಂವಾದ ನಡೆಸಿ ಸಮಸ್ಯೆ ಬಗೆಹರಿಸಬೇಕು. ಬಲವಂತದ ಕ್ರಮ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಎಐಡಿವೈಒ ಜಿಲ್ಲಾ ಅಧ್ಯಕ್ಷ ಚನ್ನಬಸವ ಜಾನೇಕಲ್ ಮಾತನಾಡಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಕ್ಷಣ ರಾಜೀನಾಮೆ ನೀಡಬೇಕು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ರದ್ದುಪಡಿಸಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಗಳ ಮೇಲಿನ ಪೊಲೀಸ್ ದಮನವನ್ನು ತಕ್ಷಣ ನಿಲ್ಲಿಸಿ, ಸೋನಂ ವಾಂಗ್ಚುಕ್ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿದರು.
ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಬಸವರಾಜ್ ಮಾತನಾಡಿದರು.
ಸಂಘಟನೆಗಳ ಮುಖಂಡರಾದ ವಿನೋದ್ ಕುಮಾರ್, ಸಂದೀಪ್, ಅಶೋಕ್, ಶ್ರೀಕಾಂತ್, ನೂರ್ ಪಾಷಾ, ಶ್ರೀನಿವಾಸ್, ನಂದೀಶ್, ವಿನೋದ್ ಮುಂತಾದ ವಿದ್ಯಾರ್ಥಿ- ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






