ರಾಯಚೂರು: ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ರಾಯಚೂರು: ರಾಜ್ಯದಲ್ಲಿ ಶೀಘ್ರದಲ್ಲೇ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಿಂಧನೂರು ಕ್ಷೇತ್ರದ ಹಿರಿಯ ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ವೀರಶೈವ ಲಿಂಗಾಯತ ಸಮಾಜದ ಉಪಾಧ್ಯಕ್ಷ ಅಶೋಕ್ ಪಾಟೀಲ್ ಅತ್ತನೂರ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಅನುಭವಸಂಪನ್ನ ಹಾಗೂ ಜನಪ್ರಿಯ ನಾಯಕರಾದ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡುವುದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು. ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಗಮನ ಹರಿಸಬೇಕೆಂದು ಮನವಿ ಮಾಡಿದರು.
ಹಂಪನಗೌಡ ಬಾದರ್ಲಿ ಅವರು ದೀರ್ಘಕಾಲದಿಂದ ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದು, ಜಿಲ್ಲೆಯ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡಿದ್ದಾರೆ. 1978ರಲ್ಲಿ ಯೂತ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾಗಿ ರಾಜಕೀಯ ಜೀವನ ಆರಂಭಿಸಿದ ಅವರು, ಸಿಂಧನೂರು ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಇದಲ್ಲದೆ, ಜಿಲ್ಲಾ ಪಂಚಾಯತ್ ಸದಸ್ಯರಾಗಿ ಹಾಗೂ 2016ರಲ್ಲಿ ಎಂಎಸ್‌ಐಎಲ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಆಡಳಿತಾತ್ಮಕ ಅನುಭವ ಪಡೆದಿದ್ದಾರೆ. ಸಿಂಧನೂರು ಪ್ರದೇಶದಲ್ಲಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಸೇರಿದಂತೆ ಹಲವು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ.
ಶಿಕ್ಷಣ ಕ್ಷೇತ್ರದಲ್ಲಿಯೂ ಗಮನಾರ್ಹ ಸೇವೆ ಸಲ್ಲಿಸಿರುವ ಅವರು, ಲಿಂಗಸುಗೂರು ಮತ್ತು ಸಿಂಧನೂರು ಭಾಗಗಳಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಶ್ರೀ ವಲ್ಲಭಲ್ಲಾರಿ ಚನ್ನಬಸವೇಶ್ವರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿದ್ದಾರೆ.
ಜಪಾನ್ ಸೇರಿದಂತೆ ವಿದೇಶಗಳಿಗೆ ಭೇಟಿ ನೀಡಿ ಆಡಳಿತ ಹಾಗೂ ಅಭಿವೃದ್ಧಿ ಕ್ಷೇತ್ರದಲ್ಲಿ ಅನುಭವ ಗಳಿಸಿರುವ ಬಾದರ್ಲಿ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ರಾಜ್ಯ ಮಟ್ಟದಲ್ಲಿ ಅವರ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಆನಂದ್ ಪಾಟೀಲ್, ಚನ್ನಬಸವ, ಶರಣರೆಡ್ಡಿ, ಶಿವಾನಂದ್ ಚುಕ್ಕಿ, ಟಿ. ಬಸವರಾಜ್, ವಿರುಪಣ್ಣಗೌಡ ಬಂಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






