ರಾಯಚೂರು | ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ರಾಯಚೂರು : ನಗರದಲ್ಲಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿಕಲಚೇತನರು ದೈನಂದಿನ ಜೀವನದಲ್ಲಿ ಇತರರ ಮೇಲೆ ಅವಲಂಬಿತರಾಗದೇ ಸ್ವಾವಲಂಬಿಯಾಗಿ ಬದುಕುವಂತೆ ಮಾಡುವ ಉದ್ದೇಶದಿಂದ ಸರ್ಕಾರ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಅದರ ಭಾಗವಾಗಿ ತ್ರೀಚಕ್ರ ವಾಹನಗಳನ್ನು ವಿತರಿಸಲಾಗುತ್ತಿದೆ ಎಂದರು.
ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವತಂತ್ರವಾಗಿ ತಮ್ಮ ಕೆಲಸಗಳನ್ನು ನಿರ್ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರ ವಿಕಲಚೇತನರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯತ್‌ಗಳಿಂದ ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಸಮಾಜವು ವಿಕಲಚೇತನರ ಬಗ್ಗೆ ಸಹಾನುಭೂತಿ ಹಾಗೂ ಸೌಜನ್ಯದಿಂದ ವರ್ತಿಸಬೇಕು. ಅವರ ಬಗ್ಗೆ ವಿಶೇಷ ಕಾಳಜಿ ವಹಿಸುವ ಅಗತ್ಯವಿದೆ ಎಂದು ಹೇಳಿದರು.
ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಾಗುವ ಎಲ್ಲ ಯೋಜನೆಗಳು ಸರಿಯಾದ ರೀತಿಯಲ್ಲಿ ತಲುಪುವಂತೆ ಪ್ರಾಮಾಣಿಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಫಲಾನುಭವಿಗಳು ತಮಗೆ ಮಂಜೂರಾದ ತ್ರೀಚಕ್ರ ವಾಹನಗಳನ್ನು ಸ್ವೀಕರಿಸಿ ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಅಸ್ಲಂ ಪಾಷಾ, ಕೆಪಿಸಿಸಿ ರಾಜ್ಯ ವಕ್ತಾರ ಡಾ.ರಝಾಕ್ ಉಸ್ತಾದ್, ಜಿಲ್ಲಾ ಕಾರ್ಯದರ್ಶಿ ಅಂಜಿನಕುಮಾರ, ಕೆ.ಇ. ಕುಮಾರ, ಕಾಂಗ್ರೆಸ್ ಮುಖಂಡರಾದ ರಮೇಶ ರೋಸ್ಲಿ, ಸತ್ಯನಾಥ, ಮುಹಮ್ಮದ್ ಉಸ್ಮಾನ್, ಸೈಯದ್ ಸುಲ್ತಾನ, ಖಾಜಾ ಮೊಯಿನುದ್ದೀನ್ (ಮೋನಾ), ದೀಪಕ ರೆಡ್ಡಿ, ಮುಹಮ್ಮದ್ ರಫಿ, ಮುನಿಯಪ್ಪ, ನರಸಿಂಹಲು, ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.







