Raichur | ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ಬಿತ್ತನೆ ಪ್ರದೇಶಕ್ಕೆ ಭೇಟಿ : ಪರಿಶೀಲನೆ

ರಾಯಚೂರು: ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಬಿತ್ತಿದ ಬೆಳೆಗಳ ಸ್ಥಿತಿಗತಿಯನ್ನು ಅವಲೋಕಿಸಲು ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್. ನಕುಲ್ ಅವರು ರಾಯಚೂರು ತಾಲೂಕಿನ ಮಸ್ಸಾಪುರ ಗ್ರಾಮಕ್ಕೆ ಭೇಟಿ ನೀಡಿ ಹತ್ತಿ ಬೆಳೆ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪ್ರಕಾಶ್ ಚೌಹಾಣ್ ಅವರು ಮಾಹಿತಿ ನೀಡಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜೂನ್ ಅಂತ್ಯದವರೆಗೆ ಜಿಲ್ಲೆಯಲ್ಲಿ ಶೇ.22ರಷ್ಟು ಮಳೆ ಕೊರತೆ ದಾಖಲಾಗಿದ್ದು, ಮಳೆ ಸಮರ್ಪಕವಾಗಿ ಹಂಚಿಕೆಯಾಗದ ಕಾರಣ ತೇವಾಂಶದ ಅಭಾವದಿಂದ ಬಿತ್ತಿದ ಬೆಳೆಗಳು ಅಸಮರ್ಪಕವಾಗಿ ಮೊಳಕೆಯೊಡೆದಿವೆ ಎಂದು ತಿಳಿಸಿದರು.
ಬರದಂತಹ ಪರಿಸ್ಥಿತಿ ನಿರ್ಮಾಣವಾದರೆ ರೈತರಿಗೆ ಬೆಳೆ ವಿಮೆ ಯೋಜನೆ ಮಹತ್ವದ ಆಸರೆಯಾಗಲಿದೆ. ಆದ್ದರಿಂದ ರೈತರಿಗೆ ಬೆಳೆ ವಿಮೆ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಿಕೊಳ್ಳುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್. ನಕುಲ್ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್., ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ್ ಕಾಂದೂ, ಮಹಾನಗರ ಪಾಲಿಕೆ ಆಯುಕ್ತ ಜೂಬಿನ್ ಮೋಹಪಾತ್ರ, ಉಪ ಕೃಷಿ ನಿರ್ದೇಶಕರು, ನಹೀಂ ಹುಸೇನ್, ರಾಯಚೂರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕಿ ದೀಪಾ ಕುಲಕರ್ಣಿ ಸೇರಿದಂತೆ ಇತರರು ಇದ್ದರು.






