Raichur | ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ : ಸೆ.30 ಕೊನೆಯ ದಿನ

ರಾಯಚೂರು : ಪಡಿತರ ಚೀಟಿಯಲ್ಲಿರುವ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಜಿಲ್ಲೆಯ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗೆ ತಮ್ಮ ಇ-ಕೆವೈಸಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಐದು ವರ್ಷ ಪೂರೈಸಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ)ಯ 1,12,639 ಹಾಗೂ ಬಿಪಿಎಲ್ ವಿಭಾಗದ 8,37,390 ಸೇರಿದಂತೆ ಒಟ್ಟು 9,50,029 ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದೆ. ಇದಕ್ಕಾಗಿ ಫಲಾನುಭವಿಗಳ ಪಟ್ಟಿಯನ್ನು ಈಗಾಗಲೇ ಆಯಾ ತಾಲ್ಲೂಕಿನ ನ್ಯಾಯಬೆಲೆ ಅಂಗಡಿ ಡೀಲರ್‌ಗಳಿಗೆ ನೀಡಲಾಗಿದೆ.
ಫಲಾನುಭವಿಗಳು ತಮ್ಮ ಪಡಿತರ ಚೀಟಿಗೆ ಜೋಡಣೆಯಾಗಿರುವ ನ್ಯಾಯಬೆಲೆ ಅಂಗಡಿಗೆ ಖುದ್ದಾಗಿ ಭೇಟಿ ನೀಡಿ ಇ-ಕೆವೈಸಿ ಮಾಡಿಸಬೇಕು. ಈ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿದ್ದು, ಯಾವುದೇ ರೀತಿಯ ಶುಲ್ಕ ಪಾವತಿಸುವ ಅಗತ್ಯವಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ.
ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಲಭ್ಯವಿರುವ ಪಟ್ಟಿಯಲ್ಲಿರುವ ಪಡಿತರ ಚೀಟಿದಾರರು ಮಾತ್ರ ಇ-ಕೆವೈಸಿ ಮಾಡಿಸಬಹುದಾಗಿದೆ.
ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸದ ಫಲಾನುಭವಿಗಳ ಹೆಸರನ್ನು ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಿಂದ ತೆಗೆದುಹಾಕುವ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.






